ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕಾವೇರಿದ ನಿರ್ವಹಣೆ

ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನಾ ಪ್ರಕ್ರಿಯೆ ಆರಂಭಿಸಿರುವುದಕ್ಕೆ ಮುಖ್ಯಮಂತ್ರಿ..

Rashmi Kasaragodu
Updated On : 7 Jun 2014, 12:20 pm

ಬೆಂಗಳೂರು: ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನಾ ಪ್ರಕ್ರಿಯೆ ಆರಂಭಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧ ಹಾಗೂ ವಿಕಾಸ ಸೌಧದ ಮಧ್ಯೆ ಧ್ಯಾನಾಸಕ್ತ ಮಹಾತ್ಮಾ ಗಾಂಧಿ ಪ್ರತಿಮೆ ನಿರ್ಮಾಣಕ್ಕೆ ಶಂಕು ಸ್ಥಾಪನೆ ಹಾಗೂ ಮಾಜಿ ಪ್ರಧಾನಿ ದಿ.ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆ ಅನಾವರಣಗೊಳಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
ಕಾವೇರಿ ನಿರ್ವಹಣಾ ಮಂಡಳಿ ರಚಿಸದಂತೆ ವಿಧಾನ ಮಂಡಲದ ಉಭಯ ಸದನಗಳ ನಾಯಕರು ಹಾಗೂ ರಾಜ್ಯದ ಸಂಸದರ ನಿಯೋಗವನ್ನು ಜೂ.10ರಂದು ದೆಹಲಿಗೆ ಕರೆದೊಯ್ಯಲಾಗುವುದು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದರು.
ನಿಯೋಗ ಕೊಂಡೊಯ್ಯುವುದಕ್ಕೆ ಮುನ್ನ ಜೂ. 9ರಂದು ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ನಡೆಸಲಾಗುವುದು. ಕೇಂದ್ರ ಸರ್ಕಾರ ಈ ಪ್ರಕ್ರಿಯೆ ಆರಂಭಿಸಿರುವ ಬಗ್ಗೆ ದೆಹಲಿಯಲ್ಲಿ ಇರುವಾಗಲೇ ಮಾಹಿತಿ ಲಭಿಸಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರ ಜತೆ ಪ್ರಧಾನಿ ಭೇಟಿ ಮಾಡುತ್ತೇನೆ ಎಂದು ಹೇಳಿದರು.
ಕಾವೇರಿ ನಿರ್ವಹಣಾ ಮಂಡಳಿ ರಚಿಸಿದರೆ ರಾಜ್ಯಕ್ಕೆ ಅನ್ಯಾಯವಾಗುತ್ತದೆ. ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆಯಾಗುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಬಾರದು ಎಂದು ಹೇಳಿದರು.
ಹಿಂದಿನ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚಿಸಬಾರದೆಂಬ ರಾಜ್ಯದ ವಾದವನ್ನು ಪುರಸ್ಕರಿಸಿತ್ತು. ಈಗಾಗಲೇ ಉಸ್ತುವಾರಿ ಸಮಿತಿ ಅಸ್ತಿತ್ವದಲ್ಲಿರುವುದರಿಂದ ಮಂಡಳಿ ಅಗತ್ಯವಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಮನಗಾಣಬೇಕು. ಕಾವೇರಿ ನ್ಯಾಯಮಂಡಳಿ ಐತೀರ್ಪಿನ ವಿರುದ್ಧ ಕೇರಳ, ಕರ್ನಾಟಕ, ತಮಿಳುನಾಡು, ಪಾಂಡಿಚೇರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿವೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಹೀಗಿರುವಾಗ ಮಂಡಳಿ ರಚನೆಯಂಥ ಅವಸರದ ಕ್ರಮಕ್ಕೆ ಕೇಂದ್ರ ಮುಂದಾಗಬಾರದು ಎಂದು ಆಗ್ರಹಿಸಿದರು.
ಈ ಸಂಬಂಧ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದಕ್ಕೆ ಈಗಲೇ ರಾಜಕೀಯ ಬಣ್ಣ ಬಳಿಯುವುದು ಸರಿಯಲ್ಲ. ಇದನ್ನು ರಾಜಕೀಯವಾಗಿ ಗ್ರಹಿಸುವುದು ಬೇಡ. ರಾಜ್ಯದ ಹಿತಾಸಕ್ತಿ ಕಾಪಾಡುವುದಷ್ಟೇ ನಮ್ಮ ಕೆಲಸ. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಪ್ರಧಾನಿ ಭೇಟಿಯಾದ ನಂತರ ಈ ಪ್ರಕ್ರಿಯೆ ಆರಂಭವಾಗಿದೆ. ಪ್ರಧಾನಿ ಭೇಟಿ ಸಂದರ್ಭದಲ್ಲಿ ತಮಿಳುನಾಡಿನ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.
ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಸಚಿವರಾದ ಅಭಯಚಂದ್ರ ಜೈನ್, ರೋಶನ್ ಬೇಗ್, ಎಚ್.ಆಂಜನೇಯ, ಮೇಯರ್ ಸತ್ಯನಾರಾಯಣ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement