ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ
ಬಹುನಿರೀಕ್ಷಿತ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ವಿಧಾನಸೌಧದ ಸಮ್ಮೇಳನ...
ಬೆಂಗಳೂರು: ಬಹುನಿರೀಕ್ಷಿತ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಬೆಳಗ್ಗೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 9ರಿಂದ ಸಾಯಂಕಾಲ 5 ಗಂಟೆಯವರೆಗೆ ನಡೆಯುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಸಂಸದರು, ರಾಜ್ಯ ಸರ್ಕಾರದ ಸಚಿವರು, ಶಾಸಕರು,ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ಸಚಿವರ ಕಾರ್ಯ ವಿಧಾನದ ಬಗ್ಗೆ ಶಾಸಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಜೂ.5ರಂದು ಸಭೆ ನಡೆಸುವುದಕ್ಕೆ ಸಿದ್ದರಾಮಯ್ಯ ಅನುಮತಿ ನೀಡಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿತ್ತು. ಈಗ ವಿಧಾನ ಮಂಡಲ ಅಧಿವೇಶನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಭೆ ಕರೆಯುವುದು ಅನಿವಾರ್ಯವಾಗಿದ್ದು, ಅಧಿವೇಶನದಲ್ಲಿ ಮಂಡಿಸುವ ವಿಧೇಯಕ ಮತ್ತು ಶಾಸಕರ ಸಮಸ್ಯೆ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (ಸಿಎಲ್ಪಿ)ಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ.
ಚರ್ಚೆಗೆ ಬರುವ ವಿಚಾರಗಳೇನು?: ಜಿಲ್ಲೆಗೆ ಸೀಮಿತವಾಗಿರುವ ಸಚಿವರು, ಅಧಿಕಾರಿಗಳು ಶಾಸಕರಿಗೆ ಅಗೌರವ ತೋರುತ್ತಿರುವ ವಿಚಾರ ಪ್ರಧಾನವಾಗಿ ಚರ್ಚೆಯಾಗಲಿದೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ, ಸರ್ಕಾರದ ವಿವಾದಾತ್ಮಕ ವಿಧೇಯಕಗಳ ಬಗ್ಗೆಯೂ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಅದ್ಧೂರಿ ಮದುವೆಗೆ ತೆರಿಗೆ ವಿಧಿಸುವ ವಿಚಾರವನ್ನು ಖುದ್ದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರೇ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದು ಬಂದಿದೆ.