ಮಂತ್ರಿ ಮಂಡಲ ವಿಸ್ತರಣೆ ಶೀಘ್ರ: ಸಚಿವ ಎಚ್.ಕೆ. ಪಾಟೀಲ್
ಮಂತ್ರಿಮಂಡಲದ ಆಯ್ಕೆ, ನಿಗಮ ಮಂಡಳಿಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ...
ಶಿರಸಿ: ಮಂತ್ರಿಮಂಡಲದ ಆಯ್ಕೆ, ನಿಗಮ ಮಂಡಳಿಗಳಿಗೆ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಅತಿ ಶೀಘ್ರದಲ್ಲಿ ಮಂತ್ರಿ ಮಂಡಲ ವಿಸ್ತರಿಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಕುರಿತು ಕಾಂಗ್ರೆಸ್ ಅಭ್ಯರ್ಥಿ ಪಿ.ಎಚ್. ನೀರಲಕೇರಿ ಪರ ಪ್ರಚಾರಕ್ಕೆ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಯಾವತ್ತೂ ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ಯಾರು ಜಾತಿ ರಾಜಕಾರಣ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೋ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ರಾಜ್ಯವನ್ನು ಕಾಂಗ್ರೆಸ್‌ಮುಕ್ತ ಮಾಡುವುದಾಗಿ ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ಹೇಳುತ್ತಾರೆ. ಲೋಕಸಭೆ ಚುನಾವಣೆಯಲ್ಲಿ ಬಹುಮತ ಸಿಕ್ಕಿದೆ ಎನ್ನುವ ಕಾರಣಕ್ಕೆ ಬಿಜೆಪಿಯವರು ಸೊಕ್ಕಿನಿಂದ ಮೆರೆಯುತ್ತಿದ್ದಾರೆ. ಆದರೆ, ನಾವು ಹಸಿವುಮುಕ್ತ, ಭ್ರಷ್ಟಾಚಾರಮುಕ್ತ ರಾಜ್ಯ ಮಾಡಲು ಪ್ರಯತ್ನಿಸುತ್ತೇವೆ ಎಂದು ಪಾಟೀಲ್ ಹೇಳಿದರು.