ನಕಲಿ ವೈದ್ಯರ ವಿರುದ್ಧ ತನಿಖೆ: ಹೈಕೋರ್ಟ್ ಆದೇಶ
ಬೆಂಗಳೂರು: ನಕಲಿ ವೈದ್ಯರ ವಿರುದ್ಧ ತನಿಖೆ ನಡೆಸಿ ಒಂದು ವಾರದಲ್ಲಿ ಪ್ರಗತಿ ವರದಿ ಸಲ್ಲಿಸುವಂತೆ ಬೆಂಗಳೂರು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ಹೈಕೋರ್ಟ್ ಆದೇಶಿಸಿದೆ. ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳಮಂಗಲದಲ್ಲಿ ಮೂವರು ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದಾರೆಂದು ಡಾ.ಬಿ.ಎನ್.ವಾದಿರಾಜ್ ದೂರು ನೀಡಿದ್ದರು. ಸ್ಥಳೀಯ ಪೊಲೀಸ್ ಅಧಿಕಾರಿಯಿಂದ ಹಿಡಿದು ಡಿಜಿ ವರೆಗೂ ದೂರು ನೀಡಿದರೂ ನಕಲಿ ವೈದ್ಯರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಬದಲಾಗಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವುದಾಗಿ ದೂರು ಬಂದ ಹಿನ್ನೆಲೆಯಲ್ಲಿ ತಮ್ಮನ್ನು ಬಂಧಿಸಿ ಕಿರುಕುಳ ನೀಡಿದ್ದಾರೆಂದು ವಾದಿರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಪೊಲೀಸ್ ಅಧಿಕಾರಿ ಅಬ್ದುಲ್ ಅಹಾದ್ ಪುತ್ತಿಗೆ ಅವರಿಗೆ ತನಿಖೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿತು. ಭ್ರಷ್ಟ ಅಧಿಕಾರಿಗಳನ್ನು ಹಿಡಿಯುವಲ್ಲಿ ಮಹತ್ತರ ಪಾತ್ರ ವಹಿಸಿದ ತಾವೇ ಈ ರೀತಿ ನಿರ್ಲಕ್ಷ್ಯ ವಹಿಸಿದರೆ ಹೇಗೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಮುಂದಿನ ನಿಚಾರಣೆಗೆ ಎಸ್‌ಪಿ ಖುದ್ದು ಹಾಜರಾಗಬೇಕೆಂದು ಆದೇಶಿಸಿದರು.