ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ

ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಅಧಿವೇಶನದ ಬಳಿಕ ಭರ್ತಿ ಮಾಡಲಾಗುವುದು...

Mainashree
Updated On : 19 Jun 2014, 10:03 am

ಕನ್ನಡಪ್ರಭವಾರ್ತೆ | ಬೆಂಗಳೂರು |ಜೂ 19
ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳನ್ನು ಅಧಿವೇಶನದ ಬಳಿಕ ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.
ವಿಧಾನ ಪರಿಷತ್‌ಗೆ ಆಯ್ಕೆಗೊಂಡ ಹಿನ್ನೆಲೆಯನ್ನು ತಮ್ಮನ್ನು ಭೇಟಿ ಮಾಡಿ ಶುಭಾಶಯ ವ್ಯಕ್ತಪಡಿಸಿದ ಗಣ್ಯರ ಜತೆ ಚರ್ಚೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ವಿಧಾನ ಪರಿಷತ್‌ಗೆ ಜಾತಿ ಆಧಾರದ ಮೇಲೆ  ನಾಮನಿರ್ದೇಶನ ಮಾಡುವುದಿಲ್ಲ. ಪರಿಷತ್‌ಗೆ ಅರ್ಹ ವ್ಯಕ್ತಿಗಳನ್ನೇ ಆಯ್ಕೆ ಮಾಡಲಾಗಿದೆ. ಸಣ್ಣಪುಟ್ಟ ವ್ಯತ್ಯಾಸಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.
ಹೈಕಮಾಂಡ್‌ಗೆ ಬಿಟ್ಟದ್ದು: 'ನನಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ. ಇದರಲ್ಲಿ ನನ್ನ ವೈಯಕ್ತಿಕ ಪ್ರತಿಷ್ಠೆ ಇಲ್ಲ. ಕೆಲ ಮುಖಂಡರು ಮತ್ತು ಸಂಘ-ಸಂಸ್ಥೆಗಳು ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿವೆ. ಆದರೆ ಈ ವಿಚಾರದಲ್ಲಿ ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ' ಎಂದರು.
ಪದಾಧಿಕಾರಿಗಳ ಸಭೆ: ಈ ತಿಂಗಳ 28 ಮತ್ತು 29ರಂದು ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಯುತ್ತದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಂದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಉಪಸ್ಥಿತರಿರುತ್ತಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಆಹ್ವಾನ ಕಳಿಸಲಾಗಿದೆ. 122 ಶಾಸಕರಿದ್ದರೂ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗಾಗಿ ಹೈಕಮಾಂಡ್ ಸಲಹೆ ಕೇಳಲಾಗುವುದು ಎಂದರು.
ಸಿಎಂಗೆ ಸಹಕಾರ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಹಿಸಿದ ಕರ್ತವ್ಯವನ್ನು ಕಳೆದ ಮೂರೂವರೆ ವರ್ಷಗಳಲ್ಲಿ ಯಶಸ್ವಿಯಾಗಿ ನಿರ್ವಹಿಸಿದ್ದೇನೆ ಎಂಬ ಆತ್ಮತೃಪ್ತಿ ನನಗಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಇನ್ನೂ ಹೆಚ್ಚಿನ ಸಾಧನೆ ಮಾಡಲು ಅಗತ್ಯ ಸಹಕಾರವನ್ನು ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುತ್ತೇನೆ ಎಂದರು.
ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್.ಡಿ. ಗಂಗರಾಜು, ಚಲನಚಿತ್ರ ಕಲಾವಿದರಾದ ಜಯಮಾಲಾ, ಭವ್ಯ, ಶ್ರೀನಿವಾಸಮೂರ್ತಿ, ಶಶಿಕುಮಾರ್, ನಿರ್ಮಾಪಕರ ಸಂಘದ ಅಧ್ಯಕ್ಷ ಎಸ್.ಎ. ಚಿನ್ನೇಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್, ಮೋಟಮ್ಮ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ. ಮುಮ್ತಾಜ್ ಅಲಿಖಾನ್, ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು ಮೊದಲಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement