ಪಡಿತರ ಚೀಟಿ: ನೂತನ ಅರ್ಜಿ ಸ್ವೀಕಾರ ಇಲ್ಲ
ಪಡಿತರ ಚೀಟಿಗೆ ಈಗಾಗಲೇ ಸಲ್ಲಿಸಿರುವ ಅರ್ಜಿ ವಿಲೇವಾರಿಯಾಗುವವರೆಗೆ ನೂತನ ಅರ್ಜಿ ಸ್ವೀಕರಿಸುವುದಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಇನ್ನೆರಡು ತಿಂಗಳಲ್ಲಿ ವಿಲೇವಾರಿ ಮಾಡಲಾಗುವುದು. ಆಧಾರ್ ಗುರುತಿನ ಸಂಖ್ಯೆ ಮೂಲಕ ಪಡಿತರ ಚೀಟಿಯ ಪರಿಶೀಲನೆ ಮಾಡಲಾಗುವುದು. ಇದಕ್ಕೆ ಎಲ್ಲ ಜನಪ್ರತಿನಿಧಿಗಳು ಸಹಕಾರ ನೀಡುವಂತೆ ಅವರು ಬಿಜೆಪಿಯ ಸಿದ್ದರಾಜು, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಅರುಣ್ ಶಹಾಪೂರ ಅವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಪಡಿತರ ವ್ಯವಸ್ಥೆ ಮೂಲಕ ಸೀಮೆಎಣ್ಣೆ ವಿತರಿಸುವವರಿಗೆ ಲಾಭಾಂಶ ಪ್ರಮಾಣ ಏರಿಸುವ ಬಗ್ಗೆ ಸರ್ಕಾರಕ್ಕೆ ಶಿಫಾರಸು ಬಂದಿದೆ. ಶೀಘ್ರದಲ್ಲಿಯೇ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.