ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕನಿಷ್ಠ 2 ವರ್ಷಗಳ ಸೇವಾವಧಿ ನಿಯಮ; ಸರ್ಕಾರಕ್ಕೆ ನೋಟಿಸ್

Mainashree
Updated On : 18 Mar 2014, 9:54 am

ಬೆಂಗಳೂರು: ಭಾರತೀಯ ಸೇವಾ ವಿಭಾಗದ ಅಧಿಕಾರಿಗಳ ವರ್ಗಾವಣೆಗೆ ಕನಿಷ್ಠ 2 ವರ್ಷಗಳ ಸೇವಾವಧಿ ನಿಗದಿಪಡಿಸಿದ ಸುಪ್ರೀಂ ಕೋರ್ಟ್ ಆದೇಶದ ಜಾರಿಯಿಂದ ಭಾರತೀಯ ಪೊಲೀಸ್ ಸೇವೆ (ಐಪಿಎಸ್)ವಿಭಾಗವನ್ನು ಹೊರಗಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಾಯಿದತ್ತ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಡಿ.ಎಚ್. ವಘೇಲ ಹಾಗೂ ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ, ಈ ಸಂಬಂಧ ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ಆದೇಶಿಸಿದೆ.
ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರದ ಆದೇಶದ ಪ್ರಕಾರ, ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿಗಳು ಒಂದು ಸ್ಥಳದಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿರಬೇಕು ಎಂಬ ವರ್ಗಾವಣೆ ನಿಯಮವನ್ನು ರಾಜ್ಯ ಸರ್ಕಾರ ಅಳವಡಿಸಿಕೊಂಡಿದೆ. ಆದರೆ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳನ್ನು ಇದರಿಂದ ಹೊರಗಿಡಲಾಗಿದೆ. ಇದು ಕಾನೂನುಬಾಹಿರ. ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಪ್ರಕಾಶ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್, ಐಎಎಸ್, ಐಪಿಎಸ್ ಸೇರಿದಂತೆ ಕೇಂದ್ರ ಸರ್ಕಾರದ ಶ್ರೇಣಿಯ ಅಧಿಕಾರಿಗಳ ವರ್ಗಾವಣೆಗೆ ಕನಿಷ್ಠ 2 ವರ್ಷಗಳ ಸೇವಾವಧಿ ನಿಗದಿಪಡಿಸಿ 1996ರಲ್ಲೇ ಆದೇಶ ಹೊರಡಿಸಿತ್ತು. ಈ ಸಂಬಂಧ 2013ರಲ್ಲಿ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು.
ಅದರಂತೆ 2014ರ ಜನವರಿಯಲ್ಲಿ ಕೇಂದ್ರ ಸರ್ಕಾರ ಭಾರತೀಯ ಸೇವಾ ವಿಭಾಗದ ಅಧಿಕಾರಿಗಳಿಗೆ ಕನಿಷ್ಠ ಸೇವಾವಧಿ ನಿಗದಿಪಡಿಸಿ ಆದೇಶ ಹೊರಡಿಸಿತ್ತು. ಇದೇ ಹಾದಿಯಲ್ಲಿ ರಾಜ್ಯ  ಸರ್ಕಾರ ಕೂಡ ಆದೇಶ ಹೊರಡಿಸಿದೆಯಾದರೂ, ಅದರಿಂದ ಐಪಿಎಸ್ ಅಧಿಕಾರಿಗಳನ್ನು ಹೊರಗಿಡಲಾಗಿದೆ. ಐಪಿಎಸ್ ಅಧಿಕಾರಿಗಳಿಗೆ ಪ್ರತ್ಯೇಕ ನಿಯಮ ರೂಪಿಸುವುದಾಗಿ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿರುವುದನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ನಿಯಮವನ್ನು ರಾಜ್ಯದಲ್ಲಿ ಕೂಡ ಯಥಾವತ್ತಾಗಿ ಅಳವಡಿಸಿಕೊಳ್ಳುವಂತೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಿದ್ದಾರೆ.

ನೀವೇನು ಕಾಶ್ಮೀರದಲ್ಲಿದ್ದೀರಾ?
ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ತಮ್ಮದೇ ಆದ ನಿಯಮ ರೂಪಿಸಲು ನೀವೇನು ಕಾಶ್ಮೀರದಲ್ಲಿದ್ದೀರೇನು? ಅಥವಾ, ನಿಮ್ಮದು ಸ್ವತಂತ್ರ ರಾಜ್ಯವೇ ಎಂದು ನ್ಯಾಯಪೀಠ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement