ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕಬ್ಬು ನೋಟಿಸ್‌ಗೆ 'ಹೈ' ತಡೆಯಾಜ್ಞೆ

ಕಬ್ಬು ಬೆಳೆಗಾರರಿಗೆ ನಿಗದಿಪಡಿಸಿರುವ ಬೆಂಬಲ ಬೆಲೆ ವಿತರಿಸದ ಸಕ್ಕರೆ...

Mainashree
Updated On : 22 May 2014, 10:42 am

ಬೆಂಗಳೂರು: ಕಬ್ಬು ಬೆಳೆಗಾರರಿಗೆ ನಿಗದಿಪಡಿಸಿರುವ ಬೆಂಬಲ ಬೆಲೆ ವಿತರಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಸರ್ಕಾರದ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ದಕ್ಷಿಣ ಭಾರತ ಸಕ್ಕರೆ ಕಾರ್ಖಾನೆಗಳ ಸಂಘಟನೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎನ್. ಕುಮಾರ್ ಅವರಿದ್ದ ರಜಾಕಾಲದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಕೇಂದ್ರ ಸರ್ಕಾರ ಈಗಾಗಲೇ ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸಿದ್ದರೂ, ರಾಜ್ಯ ಸರ್ಕಾರಕ್ಕೆ ಪರಿಷ್ಕೃತ ಬೆಂಬಲ ಬೆಲೆ ನಿಗದಿಪಡಿಸಲು ಅವಕಾಶವಿದೆಯೇ ಎಂಬ ವಾದ ಇನ್ನೂ ವಿಚಾರಣಾ ಹಂತದಲ್ಲಿದೆ. ಆದ್ದರಿಂದ ಈ ಹಂತದಲ್ಲಿ ಸರ್ಕಾರದ ಆದೇಶ ಪಾಲಿಸದ ಕಾರ್ಖಾನೆಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅವಕಾಶವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ರು. 2,100 ಬೆಂಬಲ ಬೆಲೆ ನೀಡಿ: ಈ ಸಂದರ್ಭದಲ್ಲಿ ರೈತರ ಪರ ವಾದ ಮಂಡಿಸಿದ ವಕೀಲ ಸಾಜನ್ ಪೂವಯ್ಯ, ಕೇಂದ್ರ ಸರ್ಕಾರ ಈಗಾಗಲೇ ಒಂದು ಟನ್ ಕಬ್ಬಿಗೆ 2,100 ಬೆಂಬಲ ಬೆಲೆ ನಿಗದಿಪಡಿಸಿದೆ. ಆದರೆ, ಅದನ್ನು ಕೂಡ ಬಹುತೇಕ ಕಾರ್ಖಾನೆಗಳು ರೈತರಿಗೆ ನೀಡಿಲ್ಲ ಎಂದು ಆರೋಪಿಸಿದರು.
ಇದನ್ನು ಪರಿಗಣಿಸಿದ ಪೀಠ, ಕಾರ್ಖಾನೆಗಳು ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯನ್ನು ಕಡ್ಡಾಯವಾಗಿ ನೀಡಲೇಬೇಕು. ಅದು ರೈತರ ಹಕ್ಕು ಎಂದು ಸ್ಪಷ್ಟಪಡಿಸಿ ವಿಚಾರಣೆಯನ್ನು ಮುಂದೂಡಿತು.
ವಿವಾದವೇನು?: ರಾಜ್ಯ ಸರ್ಕಾರ 2014ರ ಮೇ ಕಬ್ಬು ಬೆಳೆಗಾರರಿಗೆ ಒಂದು ಟನ್‌ಗೆ 2,300 ಬೆಂಬಲ ಬೆಲೆ ಘೋಷಿಸಿತ್ತು. ಆದರೆ, ಇದಕ್ಕೆ ಕಾರ್ಖಾನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಇದನ್ನೊಪ್ಪದ ಸರ್ಕಾರ, ಪ್ರತಿ ಜಿಲ್ಲಾಧಿಕಾರಿ ಮೂಲಕ ಮೇ 12ರಂದು ಸಕ್ಕರೆ ಕಾರ್ಖಾನೆಗಳಿಗೆ ನೋಟಿಸ್ ಜಾರಿ ಮಾಡಿತ್ತು. ಅದರಂತೆ, ಏಳು ದಿನಗಳಲ್ಲಿ ಬೆಳೆಗಾರರಿಗೆ ನಿಗದಿಪಡಿಸಿದ ಬೆಂಬಲ ಬೆಲೆ ನೀಡದಿದ್ದಲ್ಲಿ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿತ್ತು. ಇದನ್ನು ಸಕ್ಕರೆ ಕಾರ್ಖಾನೆಗಳು ಪ್ರಶ್ನಿಸಿದ್ದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement