ಕರ್ನಾಟಕ ಭೂಕಬಳಿಕೆ ನಿಷೇಧ ಕಾಯಿದೆ ಶೀಘ್ರ ಜಾರಿ
ನನೆಗುದಿಗೆ ಬಿದ್ದಿರುವ ಕರ್ನಾಟಕ ಭೂಕಬಳಿಕೆ ನಿಷೇಧ ಕಾಯಿದೆಯನ್ನು...
ಕ.ಪ್ರ. ವಾರ್ತೆ ಬೆಂಗಳೂರು ಮೇ 22
ನನೆಗುದಿಗೆ ಬಿದ್ದಿರುವ ಕರ್ನಾಟಕ ಭೂಕಬಳಿಕೆ ನಿಷೇಧ ಕಾಯಿದೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, 2007ರಲ್ಲಿ ಈ ಕಾಯಿದೆ ಜಾರಿಗೆ ತರಲಾಗಿತ್ತು. ಆದರೆ ಕಾಣದ ಕೈಗಳ ಪ್ರಭಾವದಿಂದಾಗಿ ಕೇಂದ್ರದ ಒಪ್ಪಿಗೆ ಲಭ್ಯವಾಗಿರಲಿಲ್ಲ. ಈ ಸಂಬಂಧ ಸದ್ಯದಲ್ಲೇ ಕೇಂದ್ರ ಗೃಹ ಕಾರ್ಯದರ್ಶಿಗಳ ಜತೆ ನಾನು ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.
ಆಂಧ್ರಪ್ರದೇಶದಲ್ಲಿ 1982ರಲ್ಲೇ ಇದೇ ಮಾದರಿ ಕಾಯ್ದೆ ಜಾರಿಗೆ ತರಲಾಗಿದೆ. ನಮ್ಮ ರಾಜ್ಯದಲ್ಲಿ ಕೆಲವು ಸುಧಾರಣೆಗಳೊಂದಿಗೆ ಜಾರಿಗೆ ತರುತ್ತೇವೆ. ಸದ್ಯದಲ್ಲೇ ಕಾನೂನು ಇಲಾಖೆ ಅಧಿಕಾರಿಗಳ ಜತೆ ದೆಹಲಿಗೆ ತೆರಳುತ್ತೇನೆ ಎಂದು ಹೇಳಿದರು.
ಈ ಕಾಯ್ದೆ ಅನ್ವಯ ಒತ್ತುವರಿ ಪ್ರಕರಣಗಳ ವಿಚಾರಣೆಗೆ ಪ್ರತ್ಯೇಕ ನ್ಯಾಯಾಲಯ ಸ್ಥಾಪಿಸುವ ಚಿಂತನೆ ಇದೆ. ಹೈಕೋರ್ಟ್ ನ್ಯಾಯಮೂರ್ತಿಗಳು ಇದರ ಮುಖ್ಯಸ್ಥರಾಗಿರುವುದರ ಜತೆಗೆ ಜಿಲ್ಲಾ ಸೆಷನ್ ನ್ಯಾಯಾಲಯದ ಇಬ್ಬರು ನ್ಯಾಯಾಧೀಶರು ಮತ್ತು ಇಬ್ಬರು ಜಿಲ್ಲಾಧಿಕಾರಿಗಳು ಸದಸ್ಯರಾಗಿರುತ್ತಾರೆ. ಸರ್ಕಾರಿ ಭೂಮಿ ರಕ್ಷಣೆಗೆ ಅಗತ್ಯ ಕ್ರಮಗಳನ್ನು ನಮ್ಮ ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ 62,25,339 ಎಕರೆ ಸರ್ಕಾರಿ ಭೂಮಿ ಇದೆ. 13,02,241 ಎಕರೆ ಭೂಮಿ ಒತ್ತುವರಿಯಾಗಿದೆ. 10,550 ಎಕರೆ ಭೂಮಿ ತೆರವುಗೊಳಿಸಲಾಗಿದೆ. ಇನ್ನೂ 12 ಲಕ್ಷ ಎಕರೆ ಭೂಮಿ ತೆರವುಗೊಳಿಸಬೇಕಿದೆ ಎಂದು ಹೇಳಿದರು.
ಎ.ಟಿ. ರಾಮಸ್ವಾಮಿ ಹಾಗೂ ಬಾಲಸುಬ್ರಹ್ಮಣ್ಯಂ ವರದಿ ಪ್ರಕಾರ ಸರ್ಕಾರಕ್ಕೆ ಈ ಮಾಹಿತಿ ಲಭ್ಯವಾಗಿದೆ. ಮುಂಬರುವ ದಿನಗಳಲ್ಲಿ ಭೂ ಕಬಳಿಕೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ ಎಂದು ಹೇಳಿದರು.