ಶಿವಮೊಗ್ಗ: ತೀರ್ಥಹಳ್ಳಿಯ ಬಾಲಕಿ ಕೆ.ಬಿ.ನಂದಿತಾ ನಿಗೂಢ ಸಾವಿನ ಪ್ರಕರಣದಲ್ಲಿ ನಾನೇನು ತಪ್ಪು ಮಾಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕ್ಷೇತ್ರದ ಶಾಸಕ ಕಿಮ್ಮನೆ ರತ್ನಾಕರ ಅವರು ಗುರುವಾರ ಮಾರಿಕಾಂಬ ದೇವಾಲಯದಲ್ಲಿ ಪ್ರಮಾಣ ಮಾಡಿದ್ದಾರೆ.
ಇಂದು ಬೆಳಗ್ಗೆ ತೀರ್ಥಹಳ್ಳಿಯಲ್ಲಿರುವ ಮಾರಿಕಾಂಬ ದೇವಾಲಯಕ್ಕೆ ತೆರಳಿದ ಸಚಿವರು, ದೇವರ ಹುಂಡಿಗೆ 1001 ರು. ಕಾಣಿಕೆ ಹಾಕಿ, ನಂದಿತಾ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಯಾರನ್ನೂ ರಕ್ಷಿಸುವ ಕೆಲಸ ಮಾಡಿಲ್ಲ ಎಂದು ಪ್ರಮಾಣ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಿಮ್ಮನೆ ರತ್ನಾಕರ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ತಪ್ಪು ಮಾಡಿದವರು ಮುಂದಿನ ಚುನಾವಣೆಯಲ್ಲಿ ಠೇವಣಿ ಕಳೆದುಕೊಳ್ಳಲಿ ದೇವರ ಮುಂದೆ ಪ್ರಮಾಣ ಮಾಡಿರುವುದಾಗಿ ತಿಳಿಸಿದರು.
ನಾನು ದೇವರನ್ನು ನಂಬುತ್ತೇನೆ. ಕಳೆದ ಚುನಾವಣೆಯಲ್ಲೂ ನನ್ನ ವಿರುದ್ಧ ಆರೋಪ ಮಾಡಿದ್ದರು. ಆಗ ನಾನು ಧರ್ಮಸ್ಥಳಕ್ಕೆ ಹೋಗಿ ಪ್ರಮಾಣ ಮಾಡಿದ್ದೆ. ಈಗ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.
ನಾನು ದೇವರನ್ನು ನಂಬುತ್ತೇನೆ. ಕಳೆದ ಚುನಾವಣೆಯಲ್ಲೂ ನನ್ನ ವಿರುದ್ಧ ಆರೋಪ ಮಾಡಿದ್ದರು. ಆಗ ನಾನು ಧರ್ಮಸ್ಥಳಕ್ಕೆ ಹೋಗಿ ಪ್ರಮಾಣ ಮಾಡಿದ್ದೆ. ಈಗ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು. ಅಲ್ಲದೆ ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಇಬ್ಬರೂ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.
ಶೋಭಾ ಅವರು ಯಕ್ಷಗಾನದಲ್ಲಿ ಪಾತ್ರ ಮಾಡಿದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ಕಿಮ್ಮನೆ, ನಂದಿತಾ ಪ್ರಕರಣದ ತನಿಖೆ ಮುಗಿದ ನಂತರ ನಾನು ನನ್ನ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡುತ್ತೇನೆ. ಹಾಗೆಯೇ ಅವರು ಸಹ ತಮ್ಮ ಸಂಸದ ಸ್ಥಾನಕ್ಕೆ ರಾಜಿನಾಮೆ ನೀಡಿ, ಧರ್ಮಸ್ಥಳಕ್ಕೆ ಬರಲಿ ಎಂದರು.
ಪ್ರಕರಣದ ಆರೋಪಿಗಳನ್ನು ಕಿಮ್ಮನೆ ಅವರು ರಕ್ಷಿಸಿದ್ದಾರೆ ಎಂದು ಬಿಜೆಪಿ ಹಾಗೂ ಸಂಘ ಪರಿವಾರ ಆರೋಪ ಮಾಡಿತ್ತು.