ಮಾರ್ಗಸೂಚಿ ಪಾಲಿಸದ ಶಾಲೆಗಳ ಮಾನ್ಯತೆ ರದ್ದು: ಸಿಎಂ
ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ,..
ಬೆಂಗಳೂರು: ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಮಾರ್ಗಸೂಚಿಗಳನ್ನು ಪಾಲಿಸದ ಶಾಲೆಗಳ ಮಾನ್ಯತೆಯನ್ನು ರದ್ದುಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎಚ್ಚರಿಸಿದ್ದಾರೆ.
ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ 59ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ಮಾಡಿ ಮಾತನಾಡಿದ ಸಿಎಂ, ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡನೀಯ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಮೃಗಗಳು ಸಹ ರೀತಿ ವರ್ತಿಸುವುದಿಲ್ಲ ಎಂದರು.
ಮಕ್ಕಳ ಸುರಕ್ಷತೆಯನ್ನು ಕಾಪಾಡಿಕೊಳ್ಳುವುದು ಶಾಲಾ ಆಡಳಿತ ಮಂಡಳಿಗಳ ಜವಾಬ್ದಾರಿ. ಸರ್ಕಾರ ನೀಡಿರುವ ಮಾನದಂಡವನ್ನು ಕಟ್ಟುನಿಟ್ಟಾಗಿ ಶಾಲೆಗಳು ಪಾಲಿಸಲೇಬೇಕು. ಒಂದು ವೇಳೆ ಇದರ ಉಲ್ಲಂಘನೆಯಾದ್ರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ತಿಳಿಸಿದರು.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಯಿಂದ ಆಗಮಿಸಿದ್ದ ಸುಮಾರು 9691 ಶಾಲಾ ಮಕ್ಕಳು, ಅತ್ಯಾಕರ್ಷಕ ಪಥ ಸಂಚಲನವನ್ನು ನಡೆಸಿಕೊಟ್ಟರು.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಸಚಿವ ರೇಷನ್ ಬೇಗ್, ಮೇಯರ್ ಶಾಂತಕುಮಾರಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.