25 ವರ್ಷಗಳ ಬಿಜೆಪಿ-ಶಿವಸೇನೆ 'ಮಹಾ' ಮೈತ್ರಿ ಅಂತ್ಯ
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆಯಲ್ಲಿ ಬಿಜೆಪಿ-ಶಿವಸೇನೆ ನಡುವೆ ಒಮ್ಮತ ಮೂಡದ ಹಿನ್ನಲೆಯಲ್ಲಿ 25 ವರ್ಷಗಳ ಹಳೆಯ ದೋಸ್ತಿಯನ್ನು ಬಿಜೆಪಿ ಅಂತ್ಯಗೊಳಿಸಿದೆ.
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆಯಲ್ಲಿ ಬಿಜೆಪಿ-ಶಿವಸೇನೆ ನಡುವೆ ಒಮ್ಮತ ಮೂಡದ ಹಿನ್ನಲೆಯಲ್ಲಿ 25 ವರ್ಷಗಳ ಹಳೆಯ ದೋಸ್ತಿಯನ್ನು ಬಿಜೆಪಿ ಅಂತ್ಯಗೊಳಿಸಿದೆ.
ಮುಂಬೈನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ದೇವೇಂದ್ರ ಅವರು, ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಶಿವಸೇನೆ ತನ್ನ ನಿಲುವನ್ನು ಬದಲಿಸಲು ಸಿದ್ಧವಿಲ್ಲ. ಶಿವಸೇನೆಯೊಂದಿಗಿನ ಮೈತ್ರಿಯನ್ನು ಉಳಿಸಿಕೊಳ್ಳಲು ಎಲ್ಲಾ ರೀತಿ ಪ್ರಯತ್ನಗಳನ್ನು ನಡೆಸಿದ್ದೇವು. ಆದರೆ ಶಿವಸೇನೆ ತನ್ನ ಪಟ್ಟು ಬಿಡದ ಕಾರಣ ಶಿವಸೇನೆಯೊಂದಿಗಿನ ಮೈತ್ರಿಯನ್ನು ಕಡಿದುಕೊಳ್ಳಲಾಗಿದೆ ಎಂದು ಅಧಿಕೃತವಾಗಿ ಘೋಷಿಸಿದರು.
ಶಿವಸೇನೆಯಂತೆ ಇನ್ನು ಹಲವು ಮಿತ್ರಪಕ್ಷಗಳೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಅವುಗಳಿಗೂ ನ್ಯಾಯ ಒದಗಿಸಬೇಕಾಗಿದೆ. ಆ ನಿಟ್ಟಿನಲ್ಲಿ ಶಿವಸೇನೆಯೊಂದಿಗೆ ಮೈತ್ರಿಯನ್ನು ಅಂತ್ಯಗೊಳಿಸಲಾಗಿದೆ ಎಂದರು.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 25 ವರ್ಷಗಳ ಹಳೆಯ ಪ್ರಬಲ ದೋಸ್ತಿಯನ್ನೇ ಮುರಿದುಕೊಂಡಿರುವ ಬಿಜೆಪಿ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ.
ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ 135 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಹೇಳಿತ್ತು. ಮುಖ್ಯಮಂತ್ರಿಯ ಕನಸು ಕಾಣುತ್ತಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, ಬಿಜೆಪಿ 119 ಸ್ಥಾನಗಳಲ್ಲಿ ಸ್ಪರ್ಧಿಸಲು ಹೇಳಿತ್ತು. ಹೀಗಾಗಿ ಮಿತ್ರಪಕ್ಷಗಳ ನಡುವಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿತ್ತು.
288 ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನಗಳು ಮಾತ್ರ ಬಾಕಿ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಈ ತೀರ್ಮಾನಕ್ಕೆ ಬಂದಿದೆ.