ನವದೆಹಲಿ: ಕೇಂದ್ರ ಸರ್ಕಾರದ ಉದ್ದೇಶಿಸಿತ ಭೂಸ್ವಾಧೀನ ಮಸೂದೆ ವಿರೋಧಿಸಿ ಬುಧವಾರ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿ ವೇಳೆ ರೈತರೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಎಚ್ಚೆತ್ತುಕೊಂಡ ಆಪ್ ಕಾರ್ಯಕರ್ತರು ಆ ರೈತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವನ್ನಪ್ಪಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ, ಪ್ರತಿಭಟನೆ ವೇಳೆ ರಾಜಸ್ಥಾನ ಮೂಲದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ರೈತನ ಆರೋಗ್ಯ ಸ್ಥಿತಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಆದರೆ ನಾವು ಮತ್ತು ಸರ್ಕಾರ ರೈತನ ಕುಟುಂಬದೊಂದಿಗಿದ್ದು, ಶೀಘ್ರದಲ್ಲೇ ತಾವು ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಬ್ಬರೂ ಆಸ್ಪತ್ರೆಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.
ಭೂಸ್ವಾಧೀನ ಮಸೂದೆ ವಿರುದ್ಧ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸುತ್ತಿದ್ದು, ಜಂತರ್ ಮಂತರ್‌ನಿಂದ ಸಂಸತ್‌ವರೆಗೆ ಪ್ರತಿಭಟನಾ ರ್ಯಾಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಈ ರ್ಯಾಲಿಗೆ ದೆಹಲಿ ಪೊಲೀಸರು ಅವಕಾಶ ನೀಡದಿದ್ದ ಹಿನ್ನೆಲೆಯಲ್ಲಿ ಸಂಸತ್‌ವರೆಗಿನ ಪ್ರತಿಭಟನಾ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ.