ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಅನುದಾನ ಬಳಸದಿದ್ದರೆ ಅಧಿಕಾರಿಗಳೇ ಹೊಣೆ

ವಿವಿಧ ಇಲಾಖೆಗಳಿಗೆ ಸರ್ಕಾರ ನೀಡಿದ ಅನುದಾನವನ್ನು ನಿಗದಿತ ಗಡುವಿನೊಳಗೆ ಸದ್ಬಳಕೆ ಮಾಡದಿದ್ದರೆ ಸಂಬಂದ್ಧ ಪಟ್ಟ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ...

ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Srinivasa Murthy VN
Updated On : 16 Dec 2015, 10:27 am

ಬೆಂಗಳೂರು: ವಿವಿಧ ಇಲಾಖೆಗಳಿಗೆ ಸರ್ಕಾರ ನೀಡಿದ ಅನುದಾನವನ್ನು ನಿಗದಿತ ಗಡುವಿನೊಳಗೆ ಸದ್ಬಳಕೆ ಮಾಡದಿದ್ದರೆ ಸಂಬಂದ್ಧ ಪಟ್ಟ ಅಧಿಕಾರಿಗಳನ್ನೇ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳ ವಿರುದ್ಧ ಚಾಟಿ ಬೀಸಿದ ಸಿಎಂ ಸಿದ್ದರಾಮಯ್ಯ  ಈ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಪ್ರಮುಖ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಗೆ ನಿಗದಿಯಾಗಿರುವ ಅನುದಾನವನ್ನು ಮಾರ್ಚ್ ಅಂತ್ಯದ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಇದರ ಜತೆಗೆ ಕ್ರಿಯಾ ಯೋಜನೆ ರೂಪಿಸಬೇಕು. ಇದರ ಜವಾಬ್ದಾರಿಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಕೌಶಿಕ್ ಮುಖರ್ಜಿಗೆ  ನೀಡಲಾಗಿದೆ ಎಂದು ಹೇಳಿದರು.

ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ, ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆ, ವಿಶೇಷ ಅಭಿವೃದ್ಧಿ ಯೋಜನೆ, ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆ, ಮಹಾತ್ಮಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ, ಗ್ರಾಮೀಣ ನೀರು ಸರಬರಾಜು ಮತ್ತು ಕೃಷಿ ಭಾಗ್ಯ ಕಾರ್ಯಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ರಾಜ್ಯದ ಜನರ ಅನುಕೂಲಕ್ಕಾಗಿ ಸರ್ಕಾರ  ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳ ಅನುಷ್ಠಾನಕ್ಕೆ ಬಜೆಟ್‍ನಲ್ಲಿ ಅನುದಾನ ಮಂಜೂರು ಮಾಡಲಾಗಿದೆ. ಒದಗಿಸಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ  ಮಾಡುವುದು ಕೆಳ ಹಂತದ ಅಧಿಕಾರಿಗಳ ಜವಾಬ್ದಾರಿ. ಅದೇ ರೀತಿ ಅನುದಾನ ಬಳಕೆ ಬಗ್ಗೆ ನಿಗಾವಹಿಸುವುದು ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳ ಕೆಲಸ, ಈ ವಿಚಾರದಲ್ಲಿ  ಲೋಪವಾದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಕಾರ್ಯಕ್ರಮದ ಅನುಷ್ಠಾನ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದ ಅವರು, 2015ರ ನವೆಂಬರ್ ವರೆಗೆ ಆಗಿರುವ ಸಾಧನೆ ಬಗ್ಗೆ ಪರಾಮರ್ಶೆ ನಡೆಸಿದರು. ಅಂಗನವಾಡಿ ಕೇಂದ್ರಗಳ  ನಿರ್ಮಾಣ ಹಾಗೂ ಗ್ರಾಮೀಣ ರಸ್ತೆ ದುರಸ್ತಿ, ಕುಡಿಯುವ ನೀರಿನ ಯೋಜನೆಗಳ ಬಗ್ಗೆ ಮಾಹಿತಿ ಪಡದರು. ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊರೆದಿರುವ ಕೊಳವೆಬಾವಿಗಳಿಗೆ ತುರ್ತಾಗಿ ವಿದ್ಯುತ್  ಸಂಪರ್ಕ ಕಲ್ಪಿಸಬೇಕು ಎಂದರು.

ಬಡವರಿಗೆ ಪ್ರತಿ ವರ್ಷ 3 ಲಕ್ಷ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಈ ವರ್ಷದಲ್ಲಿ 1.70 ಲಕ್ಷಕ್ಕೂ ಅಧಿಕ ಮನೆಗಳ ನಿರ್ಮಾಣವಾಗಿದೆ. ಉಳಿದ  ಮನೆಗಳ ನಿರ್ಮಾಣ ಕಾರ್ಯ ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳುತ್ತದೆ. ಫಲಾನುಭವಿಗಳನ್ನು ಗುರುತಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.  ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಲತಾ ಕೃಷ್ಣರಾವ್, ರತ್ನಪ್ರಭಾ, ಉಮೇಶ್ , ನರಸಿಂಹರಾಜು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement