ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಭರ್ಜರಿ ಮುನ್ನಡೆ ಸಾಧಿಸುತ್ತಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಫೆಬ್ರವರಿ 14ರಂದು ರಾಮಲೀಲಾ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಅರವಿಂದ್ ಕೇಜ್ರಿವಾಲ್ ಅವರು ಕಳೆದ ವರ್ಷ ಇದೇ ಫೆಬ್ರವರಿ 14ರಂದೇ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.
ಕೇಜ್ರಿವಾಲ್ಗೆ ಪ್ರಧಾನಿ ಅಭಿನಂದನೆ
ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಇದೇ ಮೊದಲ ಬಾರಿಗೆ ಕೇಜ್ರಿವಾಲ್ ಅವರಿಗೆ ದೂರವಾಣಿ ಕರೆ ಮಾಡಿ ಮಾತಾಡಿಸಿದ ಮೋದಿ, ಆಪ್ ದಿಗ್ವಿಜಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ದೆಹಲಿ ಅಭಿವೃದ್ಧಿಗೆ ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಮತ್ತು ಕೇಜ್ರಿವಾಲ್ ಅವರನ್ನು ಚಹಾಕೂಟಕ್ಕೆ ಆಹ್ವಾನಿಸಿದ್ದಾರೆ.
ಬಿಜೆಪಿಗೆ ಪ್ರತಿಪಕ್ಷ ಸ್ಥಾನ ಸಿಗುವುದು ಡೌಟ್
ಹೀನಾಯ ಸೋಲು ಅನುಭವಿಸುತ್ತಿರುವ ಕಿರಣ್ ಬೇಡಿ ನೇತೃತ್ವದ ದೆಹಲಿ ಬಿಜೆಪಿಗೆ ಅಧಿಕೃತ ಪ್ರತಿಪಕ್ಷ ಸ್ಥಾನ ದೊರೆಯುವುದು ಅನುಮಾನವಾಗಿದೆ. ದೆಹಲಿ ವಿಧಾನಸಭೆಯಲ್ಲಿ ಅಧಿಕೃತ ಪ್ರತಿಪಕ್ಷ ಸ್ಥಾನ ಪಡೆಯಲು ಕನಿಷ್ಠ 7 ಸ್ಥಾನಗಳು ಬೇಕು. ಆದರೆ ಬಿಜೆಪಿ ಸದ್ಯ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದರೂ, ಫಲಿತಾಂಶ ಹೊರಬಿದ್ದಾಗ ಹೆಚ್ಚು ಕಮ್ಮಿಯಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರತಿಪಕ್ಷ ಸ್ಥಾನ ಸಿಗುವುದು ಡೌಟ್ ಎನ್ನಲಾಗುತ್ತಿದೆ.
ದೆಹಲಿ ವಿಧಾನಸಭೆಯಲ್ಲಿ ಕಳೆದ ಬಾರಿ 28 ಸ್ಥಾನಗಳಲ್ಲಿ ಗೆದ್ದಿದ್ದ ಎಎಪಿ ಈ ಬಾರಿ 64 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿ 31 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ, ಭಾರೀ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸದೇ ತೀವ್ರ ಮುಖಭಂಗ ಅನುಭವಿಸಿದೆ.