ಬೆಂಗಳೂರು: ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಹಿನ್ನೆಲೆಯಲ್ಲಿ, ರೈತರ ಆತ್ಮಹತ್ಯೆ ಬಗ್ಗೆ ವಿಸ್ತೃತ ವರದಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುರುವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ನಿತ್ಯ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ ಎಂದಿರುವ ರಾಜ್ಯಪಾಲರು, ದೇಶದ ಬೆನ್ನೆಲುಬು ರೈತರ ಆತ್ಮಹತ್ಯೆಗೆ ಕಾರಣ ಏನು? ಆತ್ಮಹತ್ಯೆ ತಡೆಗೆ ರಾಜ್ಯ ಸರ್ಕಾರ ಏನು ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಈ ಬಗ್ಗೆ ವಿವರ ಸಲ್ಲಿಸುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.
ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ರಾಜ್ಯಪಾಲರು, ರೈತರ ಆತ್ಮಹತ್ಯೆ ವಿಚಾರಕ್ಕೆ ಹೇಗೆ ಸ್ಪಂದಿಸುತ್ತಿದ್ದೀರಿ ಎಂಬ ಬಗ್ಗೆ ವಿವರ ನೀಡುವಂತೆ ಸೂಚಿಸಿದ್ದಾರೆ.
ಈವರೆಗೆ ರಾಜ್ಯದಲ್ಲಿ ಎಷ್ಟು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ ಮತ್ತು ಆತ್ಮಹತ್ಯೆಗೆ ಮೀಟರ್ ಬಡ್ಡಿ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿವೆ. ಮೀಟರ್ ಬಡ್ಡಿ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ಕ್ರಮ ಏನು? ಎಲ್ಲದರ ಬಗ್ಗೆ ಸಂಪೂರ್ಣ ವಿವರ ಸಲ್ಲಿಸಿ ಎಂದು ಸೂಚಿಸಿದ್ದಾರೆ.