ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರಿಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಬುಧವಾರ ನೋಟಿಸ್ ಜಾರಿ ಮಾಡಿದೆ.
ಜುಲೈ 25ರೊಳಗೆ ವಿಚಾರಣೆಗೆ ಹಾಜರಾಗುವಂತೆ ಅಶ್ವಿನ್ ರಾವ್‌ಗೆ ಎಸ್‌ಐಟಿ ಹಿರಿಯ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಈಗಾಗಲೇ 1 ಕೋಟಿ ರುಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪಿಗಳ ಪೈಕಿ ಪ್ರಮುಖ ಆರೋಪಿ ಅಶೋಕ್ ಕುಮಾರ್ ಸೇರಿದಂತೆ ಮೂವರು ಆರೋಪಿಗಳನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದು, ಇಂದು ಮತ್ತೊಬ್ಬ ಪ್ರಮುಖ ಆರೋಪಿ ಅಶ್ವಿನ್ ರಾವ್‌ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ಅವರು ನೀಡಿದ ದೂರು ಆಧರಿಸಿ ತನಿಖೆ ನಡೆಸುತ್ತಿರುವ ಎಸ್.ಐಟಿ ಅಧಿಕಾರಿಗಳು, ಕೃಷ್ಣಮೂರ್ತಿಯವರನ್ನು ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡ ವ್ಯಕ್ತಿ ಯಾರು ಎನ್ನುವ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.