ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಅವರು ಗುರುವಾರ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್, ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ. ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದರು. ಅಲ್ಲದೆ ವಿಧಾನಸಭೆಯಲ್ಲಿ ಸರ್ಕಾರದ ಹೇಳಿದ ನಿಲುವಿಗೆ ಸಚಿವ ಸಂಪುಟ ಬದ್ಧವಾಗಿದೆ ಎಂದು ಹೇಳಿದರು.
ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂಬ ಕೂಗು ಬಲವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದಿಢೀರ್ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಕುರಿತು ಚರ್ಚಿಸಲಾಯಿತು.
ಇನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗಗಳಾಗಿ ವಿಭಜಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.