ಅಕ್ರಮ ಗಣಿಗಾರಿಕೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದಾಗಿ ಪ್ರಾಕೃತಿಕ ಸಂಪತ್ತು ಲೂಟಿಯಾಗಿದೆ. ರಾಜ್ಯದಲ್ಲಿ ಎಷ್ಟು ಅದಿರು ಇದೆ ಎಂಬ ಮಾಹಿತಿ ರಾಜ್ಯಕ್ಕೆ ಗೊತ್ತಿಲ್ಲ ಮತ್ತು ಆ ಬಗ್ಗೆ....
ನವದೆಹಲಿ: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದಾಗಿ ಪ್ರಾಕೃತಿಕ ಸಂಪತ್ತು ಲೂಟಿಯಾಗಿದೆ. ರಾಜ್ಯದಲ್ಲಿ ಎಷ್ಟು ಅದಿರು ಇದೆ ಎಂಬ ಮಾಹಿತಿ ರಾಜ್ಯಕ್ಕೆ ಗೊತ್ತಿಲ್ಲ ಮತ್ತು ಆ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯೂ ಸರ್ಕಾರಕ್ಕೆ ಇದ್ದಂತಿಲ್ಲ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಸಿ ಕೆಟಗರಿ ಗಣಿ ಹರಾಜು ಪ್ರಕ್ರಿಯೆಯನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್ ಹಿರೇಮಠ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಈಗಾಗಲೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದವರು ಸಹ ಸಿ ಕೆಟಗೆರಿ ಹರಾಜಿನಲ್ಲಿ ಗಣಿ ಗುತ್ತಿಗೆ ಪಡೆದಿದ್ದಾರೆ. ಆದರೆ ರಾಜ್ಯದಲ್ಲಿ ಎಷ್ಟು ಅದಿರು ಇದೆ ಮತ್ತು ಅದಿರು ಸಂಪತ್ತು ಲೂಟಿಯಾಗದಂತೆ ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಅಲ್ಲದೆ ಈ ಕುರಿತು ಏಪ್ರಿಲ್ 10ರೊಳಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯ ಸರ್ಕಾರದ ವಾದ ಮಂಡನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್, ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.