ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

165 ಭರವಸೆಗಳ ಪೈಕಿ 100 ಈಡೇರಿಸಿದ್ದೇವೆ, ಹೀಗಾಗಿ 2 ವರ್ಷದ ಸಾಧನೆ ತೃಪ್ತಿ ತಂದಿದೆ: ಸಿಎಂ

ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Lingaraj Badiger
Updated On : 13 May 2015, 12:53 pm

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಇಂದಿಗೆ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಪ್ರೆಸ್‌ಕ್ಲಬ್‌ನಲ್ಲಿ ಮಾಧ್ಯವ ಸಂವಾದದಲ್ಲಿ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಇವತ್ತಿಗೆ ಎರಡು ವರ್ಷ ಪೂರ್ಣಗೊಳಿಸಿದೆ. ಮೂರು ಬಜೆಟ್‌ನಲ್ಲಿ ಸಾಕಷ್ಟು ಭರವಸೆಗಳನ್ನು ಈಡೇರಿಸಿದ್ದೇವೆ. ಜನರ ನಿರೀಕ್ಷೆಗೆ ಧಕ್ಕೆಯಾಗದಂತೆ ಕೆಲಸ ಮಾಡಿದ್ದೇವೆ. ಹೀಗಾಗಿ ನನ್ನ ಎರಡು ವರ್ಷದ ಆಡಳಿತ ತೃಪ್ತಿ ತಂದಿದೆ ಎಂದರು.

ನಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 165 ಭರವಸೆಗಳನ್ನು ನೀಡಲಾಗಿತ್ತು. ಆ ಪೈಕಿ ಈಗ 100ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ್ದೇವೆ. 1 ಕೋಟಿ ಕುಟುಂಬಕ್ಕೆ ಬಿಪಿಎಲ್ ಕಾರ್ಡ್ ಕೊಟ್ಟಿದ್ದೇವೆ. ನಾಲ್ಕು ಕೋಟಿ ಜನರಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡಿದ್ದೇವೆ. ರಾಜ್ಯದ 21 ಲಕ್ಷ ಜನರಿಗೆ ಬಡ್ಡಿ ರಹಿತ ಸಾಲ ನೀಡಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಪ್ರತಿಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಐದು ವರ್ಷ ಆಡಳಿತದಲ್ಲಿ ಜಗತ್ತಿನಲ್ಲಿ ಎಲ್ಲೂ ನಡೆಯದಷ್ಟು ಭ್ರಷ್ಟಾಚಾರ ನಡೆಸಿದೆ. ಬಿಜೆಪಿ ನಾಯಕರು ಅತ್ಯಾಚಾರ, ಅನಾಚಾರ ನಡೆಸಿದ್ದರು. ಆದರೆ ಹಿಂದೆ ನಡೆದಷ್ಟು ಅತ್ಯಾಚಾರ, ಭ್ರಷ್ಟಾಚಾರ ಈಗ ನಡೆದಿಲ್ಲ. ಎಲ್ಲವನ್ನು ಜನರ ತೀರ್ಮಾನಕ್ಕೆ ಬಿಟ್ಟಿರುವುದಾಗಿ ಹೇಳಿದರು.

ಪ್ರತಿಪಕ್ಷಗಳು ಟೀಕೆ ಮಾಡಬೇಕು. ಅದನ್ನು ನಾವು ಸ್ವೀಕರಿಸುತ್ತೇವೆ. ಆದರೆ ರಾಜಕೀಯಕ್ಕಾಗಿ ಪ್ರತಿಪಕ್ಷಗಳು ನಮ್ಮ ಮೇಲೆ ವಿನಾಕಾರಣ ಗೂಬೆ ಕೂರಿಸುವ ಕೆಲಸ ಮಾಡುತ್ತಿವೆ ಎಂದು ಸಿಎಂ ಆರೋಪಿಸಿದರು.

ಇತ್ತೀಚೆಗಿನ ಕೆರೆ ಒತ್ತುವರಿ ತೆರವು ಪ್ರಕರಣ ಹಾಗೂ ನಂದಿತಾ ಸಾವು ಪ್ರಕರಣಗಳಲ್ಲಿ ಪ್ರತಿಪಕ್ಷಗಳು ಅನಾವಶ್ಯಕವಾಗಿ ರಾಜಕೀಯ ಮಾಡಿದವು ಎಂದ ಸಿದ್ದರಾಮಯ್ಯ, ಪ್ರತಿಪಕ್ಷಗಳು ಸರ್ಕಾರದ ಸಾಧನೆಗಳನ್ನು ಕಣ್ಣುಬಿಟ್ಟು ನೋಡಬೇಕು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement