ನವದೆಹಲಿ: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಕ್ಲೀನ್‌ಚಿಟ್ ಪಡೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಹೈಕಮಾಂಡ್ ಸೂಚನೆ ನೀಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಕರ್ನಾಟಕ ಹೈಕೋರ್ಟ್ ನಿರ್ದೋಷಿ ಎಂದು ತೀರ್ಪು ನೀಡಿದ ಬೆನ್ನಲ್ಲೆ ಜಯಲಲಿತಾ ಅವರು ಇಂದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಯಲಲಿತಾ ಅವರ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಿದ್ದೀರಾ ಎಂದು ವರದಿಗಾರರು ಪ್ರಶ್ನಿಸಿದರು. 'ಇಲ್ಲ ರಾಜ್ಯದ ವಿಷಯಗಳಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸುವುದಿಲ್ಲ ಮತ್ತು ಈ ಬಗ್ಗೆ ಸೋನಿಯಾ ಅವರ ಸೂಚನೆಯ ಅಗತ್ಯ ಇಲ್ಲ' ಎಂದರು.
ಜಯಲಲಿತಾ ಅವರ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಕಾನೂನು ಇಲಾಖೆ ಪರಿಶೀಲನೆ ನಡೆಸುತ್ತಿದೆ. ಇಲಾಖೆ ವರದಿ ನೀಡಿದ ಬಳಿಕ ಹೈಕೋರ್ಟ್ ತೀರ್ಪು ಪ್ರಶ್ನಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಈಗಾಗಲೇ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ವಿಶೇಷ ಅಭಿಯೋಜಕ ಬಿ.ವಿ.ಆಚಾರ್ಯ ಮೇಲ್ಮನವಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಆದರೆ ರಾಜ್ಯ ಸರ್ಕಾರ ಇನ್ನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.