ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು ಹೈಕೋರ್ಟ್ ರದ್ದು ಮಾಡಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿತ್ತು. ತೀರ್ಪಿನ ಬಗ್ಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಬಿವಿ ಆಚಾರ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಳಗ್ಗೆ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಜಯಲಲಿತಾ ಪ್ರಕರಣದ ಸಂಬಂಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಎಸ್‍ಪಿಪಿ ವಿ.ಎಸ್. ಆಚಾರ್ಯ ಅವರು ನೀಡಿರುವ ವರದಿ ಹಾಗೂ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್ ಅವರ ಅಭಿಪ್ರಾಯವನ್ನು ಆಧರಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
ಮೇ 25ರಂದು ನಡೆದ ಸಚಿವ ಸಂಪುಟ ಸಭೆಯಲ್ಲೇ ಜಯಲಲಿತಾ ಪ್ರಕರಣದ ಮೇಲ್ಮನವಿ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಕೆಲವು ಅಂಶಗಳ ಬಗ್ಗೆ ಅಡ್ವೊಕೇಟ್ ಜನರಲ್ ಅವರಿಂದ ಮಾಹಿತಿ ಅಗತ್ಯವಿದ್ದು, ಅವರು ಆ ಸಂದರ್ಭದಲ್ಲಿ ನಗರದಲ್ಲಿ ಇರಲಿಲ್ಲ. ಹೀಗಾಗಿ, ಆಗ ನಿರ್ಧಾರವಾಗಿರಲಿಲ್ಲ. ಈಗ ಎಲ್ಲ ಮಾಹಿತಿಯನ್ನು ಪಡೆದುಕೊಂಡಿರುವ ಸರ್ಕಾರ, ಸಚಿವ ಸಂಪುಟದಲ್ಲಿ ಅಂತಿಮ ನಿರ್ಧಾರ ಕೈಗೊಂಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದ ನಂತರ ಜಯಲಲಿತಾ ಇತ್ತೀಚೆಗಷ್ಟೇ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.