ಚಿತ್ರದುರ್ಗ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಂದ್ ರಾಜ್ಯ ಸರ್ಕಾರ ಪರೋಕ್ಷ ಬೆಂಬಲ ನೀಡಿದೆ ಎಂದು ಆರೋಪಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಇಂದಿನ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ರಾಜ್ಯ ಸರ್ಕಾರ ಪರೋಕ್ಷ ಬೆಂಬಲ ನೀಡಿದ್ದು, ಇದು ರಾಜ್ಯದಲ್ಲಿ ಅರಾಜಕತೆ ಉಂಟು ಮಾಡುವ ಮತ್ತು ಕೇಂದ್ರ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯತ್ನ ಎಂದು ವಾಗ್ದಾಳಿ ನಡೆಸಿದರು.
ಬರ ನಿರ್ವಹಣೆಯಲ್ಲೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಯಡಿಯೂರಪ್ಪ, ರೈತರ ಸಮಸ್ಯೆಗಳ ಚರ್ಚೆಗೆ ಸರ್ಕಾರ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧವೂ ವಾಗ್ದಾಳಿ ನಡೆಸಿದ ಬಿಎಸ್‌ವೈ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿಯಿಂದ ಹೊರಬಂದು ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿ ಎಂದಿದ್ದಾರೆ.