ಬೆಂಗಳೂರು: ಹಿರಿಯ ಸಂಶೋಧಕ ಹಾಗೂ ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ತನ್ನ ನಿರ್ಧಾರವನ್ನು ರಾಜ್ಯ ಸರ್ಕಾರ ಮರು ಪರಿಶೀಲಿಸುತ್ತಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಕೆ.ಜೆ.ಜಾರ್ಜ್ ಅವರು, ಇತ್ತೀಚಿಗೆ ಕಲಬುರ್ಗಿ ಕುಟುಂಬವನ್ನು ಭೇಟಿ ಮಾಡಿದ್ದ ಮೆಘಾ ಪನ್ಸರೆ ಹಾಗೂ ಅಂಧಶ್ರದ್ಧ ನಿರ್ಮೂಲನಾ ಸಮಿತಿಯ ಸದಸ್ಯರ ಮನವಿ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸುವ ನಿರ್ಧಾರವನ್ನು ಪುನರ್ ಪರಿಶೀಲಿಸಲಾಗುವುದು ಎಂದರು.
ಪ್ರಗತಿಪರ ವಿಚಾರಗಳ ಹೋರಾಟಗಾರ ದಿ.ಗೋವಿಂದ ಪನ್ಸರೆ ಅವರ ಸೊಸೆ ಮೇಘನಾ ಅವರು, ರಾಜ್ಯ ಸರ್ಕಾರವೇ ಕಲಬುರ್ಗಿ ಪ್ರಕರಣದ ತನಿಖೆ ನಡೆಸುವುದು ಉತ್ತಮ ಎಂದು ಸಲಹೆ ನೀಡಿದ್ದಾರೆ. ಅಲ್ಲದೆ ಸಿಬಿಐ ತನಿಖೆ ನಡೆಸುತ್ತಿರುವ ನರೇಂದ್ರ ದಾಭೋಲ್ಕರ್ ಹಾಗೂ ಗೋವಿಂದ ಪನ್ಸರೆ ಅವರ ಹತ್ಯೆ ಪ್ರಕರಣದಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಇದುವರೆಗೂ ಹಂತಕರು ಯಾರೂ ಎಂಬುದು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.
ಈಗ ಸಿಐಡಿ ನಡೆಸುತ್ತಿರುವ ತನಿಖೆಯ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಈಗ ಪ್ರಕರಣವನ್ನು ಸಿಬಿಐಗೆ ವಹಿಸಬೇಕೋ ಅಥವಾ ಸಿಐಡಿಯೇ ಮುಂದುವರೆಸಬೇಕೋ ಎಂಬುದರ ಬಗ್ಗೆ ಮುಖ್ಯಮಂತ್ರಿಗಳ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ಜಾರ್ಜ್ ತಿಳಿಸಿದ್ದಾರೆ.