ಬಿಎಸ್ ವೈ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಚಿಂತನೆ ಇಲ್ಲ: ಟಿ.ಬಿ. ಜಯಚಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಚಿಂತನೆ ಸರ್ಕಾರ ನಡೆಸಿಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪ ಅವರ ವಿರುದ್ಧದ ಕೇಸ್‌ಗಳನ್ನು ರದ್ದು ಮಾಡಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಕಾನೂನು ಸಚಿವರು, ಯಡಿಯೂರಪ್ಪ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಯೋಚನೆ ರಾಜ್ಯ ಸರ್ಕಾರದ ಮುಂದಿಲ್ಲ ಎಂದರು.
ಬಿಎಸ್ ವೈ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತಾಗಿ ಖಾಸಗಿ ವ್ಯಕ್ತಿಗಳು ಕಾನೂನು ಇಲಾಖೆ ಸಲಹೆ ಕೇಳಿದ್ದಾರೆ. ಮೇಲ್ಮನವಿ ಸಲ್ಲಿಸಿದರೆ ಸರ್ಕಾರದ ಅಭ್ಯಂತರವೇನು ಇಲ್ಲ ಎಂದು ಜಯಚಂದ್ರ ತಿಳಿಸಿದರು.
ಇನ್ನು ಈ ಬಗ್ಗೆ ಪ್ರತಿಕ್ರಿಸಿಯಿದ ಮಾಜಿ ಸಿಎಂ, ರಾಜ್ಯ ಸರ್ಕಾರ ನಾನು ರಾಜ್ಯಾಧ್ಯಕ್ಷನಾದ ನಂತರ ಜನರಿಂದ ಬಂದ ಪ್ರತಿಕ್ರಿಯೆ ನೋಡಿ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಬಿಎಸ್ ವೈ ಕಿಡಿ ಕಾರಿದರು.