ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಬುಧವಾರ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇಂದು ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಯಡಿಯೂರಪ್ಪ ಅವರ ವಿರುದ್ಧದ ಕೇಸ್‌ಗಳನ್ನು ರದ್ದು ಮಾಡಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಬಿಎಸ್ ವೈ ವಿರುದ್ಧದ 16 ಪ್ರಕರಣಗಳ ಪೈಕಿ 15 ಕೇಸ್ ಗಳಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಟಿ.ಬಿ.ಜಯಚಂದ್ರ ಅವರು ತಿಳಿಸಿದ್ದಾರೆ.
ಕೆಲವು ಕಾರಣಗಳಿಂದ ಯಡಿಯೂರಪ್ಪ ವಿರುದ್ಧದ ಕೇಸ್ ಗಳು ಹೈಕೋರ್ಟ್ ನಲ್ಲಿ ರದ್ದಾಗಿದ್ದವು. ಆದರೆ ಈಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಕಾನೂನು ಪ್ರಕ್ರಿಯೆಗಾಗಿ ವಕೀಲ ಜೋಸೆಫ್ ಅರಿಸ್ಟಾಟಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಬಿಎಸ್ ವೈ ಪ್ರಕರಣಗಳ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ಲೋಕಾಯುಕ್ತ ಸಹ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.
ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಎಎಜಿ ಪೊನ್ನಣ್ಣ ಅವರು ವರದಿ ಸಲ್ಲಿಸಿದ್ದರು. ಅಲ್ಲದೇ ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖಿಸಿ ಎಎಜಿ ಸಭೆಯಲ್ಲಿ ವಿವರಣೆ ನೀಡಿದ್ದರು. ಸಮಗ್ರ ಮಾಹಿತಿ, ಚರ್ಚೆಯ ಬಳಿಕ ಯಡಿಯೂರಪ್ಪ ವಿರುದ್ಧದ ಪ್ರಕರಣಗಳಿಗೆ ಮರುಜೀವ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.