ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ರಾಷ್ಟ್ರಧ್ವಜ ಹಾರಾಟ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಜವಾಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಆದಂತಹ ಘಟನೆಗಳು ಬೇರೆಲ್ಲೂ ನಡೆಯಬಾರದು ಹಾಗೂ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಹೆಚ್ಚಿಸುವ ಉದ್ದೇಶದಿಂದ ಕೇಂದ್ರೀಯ ವಿಶ್ವ ವಿದ್ಯಾಲಯದಲ್ಲಿ ರಾಷ್ಟ್ರಧ್ವಜ ಹಾರಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಎಲ್ಲಾ 46 ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಕಚೇರಿ ತುತ್ತ ತುದಿ ಮೇಲೆ 207 ಅಡಿ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸಬೇಕು ಎಂಬ ನಿರ್ಧಾರವನ್ನು ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಗುರುವಾರ ಕರೆದಿದ್ದ ಕೇಂದ್ರೀಯ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಜೆಎನ್ ಯುನಲ್ಲಿ ತಕ್ಷಣ ರಾಷ್ಟ್ರಧ್ವಜ ಹಾರಿಸಬೇಕೆಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜೆಎನ್ ಯು ಕೆಲ ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆಗಳು ಕೂಗಿ, ನಡೆಸಲಾಗುತ್ತಿರುವ ಪ್ರತಿಭಟನೆಗಳು ಹಾಗೂ ಹೈದ್ರಾಬಾದ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಮಾನವ ಸಂಪನ್ಮೂಲ ಸಚಿವರು ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳ ಸಭೆ ಕರೆದಿದ್ದರು.
ಸಭೆಯಲ್ಲಿ ಪರಿಶಿಷ್ಟ ಜಾತಿ ಪಂಗಡ ವಿದ್ಯಾರ್ಥಿಗಳ ಕುಂದು ಕೊರತೆ ನಿವಾರಣೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ, ತಾರತಮ್ಯ ಹೋಗಲಾಡಿಸಲು ಅಧಿಕಾರಿಗಳನ್ನು ನೇಮಕ ಮಾಡಿರುವ ಬಗ್ಗೆ, ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 2012ರ ಯುಜಿಸಿ ನಿರ್ದೇಶನಗಳನ್ನು ವಿಶ್ವವಿದ್ಯಾಲಯಗಳಲ್ಲಿ ಪಾಲಿಸಲಾಗಿದೆಯೇ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.