ನವದೆಹಲಿ: ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ್ ಮಸೂದ್ ಅಜರ್ ಬಂಧನದ ಬಗ್ಗೆ ಪಾಕಿಸ್ತಾನ ಭಾರತಕ್ಕೆ ಯಾವುದೇ ಮಾಹಿತಿ ನೀಡಿಲ್ಲ ಎಂದು ವಿದೇಶಾಂಗ ಸಚಿವಾಲಯ(ಎಂಇಎ)ದ ವಕ್ತಾರ ವಿಕಾಸ್ ಸ್ವರೂಪ್ ಅವರು ಗುರುವಾರ ಹೇಳಿದ್ದಾರೆ.
ಅಜರ್‌ನನ್ನು ಬಂಧಿಸಲಾಗಿದೆ ಎಂಬ ಪಾಕ್ ಮಾಧ್ಯಮಗಳ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಸ್ವರೂಪ್, ಮಸೂದ್ ಅಜರ್ ಬಂಧನದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಆದರೆ ಪಠಾಣ್‌ಕೋಟ್ ಉಗ್ರ ದಾಳಿಯ ತನಿಖೆಗೆ ಸಂಬಂಧಿಸಿದಂತೆ ಪಾಕ್ ತೆಗೆದುಕೊಂಡ ಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಪಾಕ್ ವಿಶೇಷ ತನಿಖಾ ತಂಡ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಲ್ಲಿದ್ದೇವೆ ಎಂದು ಸ್ವರೂಪ್ ತಿಳಿಸಿದ್ದಾರೆ.
ಇದೇ ವೇಳೆ ನಾಳೆ ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆಯನ್ನು ಸದ್ಯಕ್ಕೆ ಮುಂದೂಡಲಾಗಿದ್ದು, ಪರಸ್ಪರ ಒಪ್ಪಿಗೆಯೊಂದಿಗೆ ಮತ್ತೊಂದು ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಪಠಾಣ್‌ಕೋಟ್ ದಾಳಿಯ ತನಿಖೆಗೆ ಸಂಬಂಧಿಸಿದಂತೆ ಉಭಯ ದೇಶಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರು ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಎಂಇಎ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics