ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ವಹಿಸಲಾಗಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಕೆಲ ವಿಚಾರಗಳನ್ನು ಗಣಪತಿಯವರು ಪ್ರಸ್ತಾಪ ಮಾಡಿರುವುದು ಗಮನಕ್ಕೆ ಬಂದಿದೆ. ತನಿಖೆ ಸಂಪೂರ್ಣಗೊಂಡ ನಂತರವಷ್ಟೇ ಸತ್ಯಾಂಶ ಹೊರಬರಬೇಕಿದೆ ಎಂದು ಹೇಳಿದ್ದಾರೆ.
ಜಾರ್ಜ್ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಸ್ತುತ ತನಿಖೆ ಪ್ರಗತಿಯಲ್ಲಿದ್ದು, ಯಾರ ವಿರುದ್ಧವೂ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಸತ್ಯಾಂಶ ಹೊರಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ಹೇಳಿದ್ದಾರೆ.