ಬೆಂಗಳೂರು: ಮಂಗಳೂರು ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ ಎಂದು ಮಾಜಿ ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.
ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಗಳ ಸಂಬಂಧ ಸ್ಪಷ್ಟನೆ ನೀಡಿರುವ ಅವರು, ನಾನು ಯಾರಿಗೂ ಯಾವುದೇ ರೀತಿಯ ಕಿರುಕುಳವನ್ನು ನೀಡಿಲ್ಲ. ಪ್ರಕರಣದಲ್ಲಿ ನನ್ನ ಹೆಸರು ಯಾವ ಕಾರಣಕ್ಕೆ ಬಂದಿದೆ ಎಂಬುದು ಅರ್ಥವಾಗುತ್ತಿಲ್ಲ. ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಹಿಂದೆ ನನ್ನ ಪಾತ್ರವಿಲ್ಲ. ನನ್ನ ವಿರುದ್ಧ ಪಿತೂರಿ ನಡೆಸಲಾಗಿದ್ದು, ಪ್ರತಿಪಕ್ಷಗಳ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.
2008ರಲ್ಲಿ ನಡೆದ ಚರ್ಚ್ ದಾಳಿ ಸಂದರ್ಭದಲ್ಲಿ ಕೆಲ ಲೋಪವೆಸಗಿದ ಹಿನ್ನೆಲೆಯಲ್ಲಿ ಗಣಪತಿಯವರನ್ನು ವರ್ಗಾವಣೆ ಮಾಡಲಾಗಿತ್ತು. ವರ್ಗಾವಣೆ ಪ್ರಶ್ನಿಸಿ ಗಣಪತಿ ಅವರು ನನ್ನನ್ನು ಭೇಟಿ ಮಾಡಿ ಮಾತನಾಡಿದ್ದರು. ವರ್ಗಾವಣೆ ಹಿಂಪಡೆಯುವಂತೆ ಮನವಿ ಮಾಡಿದ್ದರು. ಆದರೆ, ತನಿಖೆ ಪ್ರಗತಿಯಲ್ಲಿರುವುದರಿಂದ ಪ್ರಸ್ತುತ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದೆ ಎಂದು ಹೇಳಿಕೊಂಡಿದ್ದಾರೆ.
ಇದೇ ವೇಳೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವುದಾಗಿ ಹೇಳಿರುವ ಅವರು, ಪ್ರಕರಣ ಸಂಬಂಧ ಮುಖ್ಯಮಂತ್ರಿಯವರಿಗೆ ವಿವರಣೆ ನೀಡುತ್ತೇನೆಂದು ಹೇಳಿದ್ದಾರೆ.