ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಯ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲು ಸಿದ್ಧವಿದ್ದು, ಮೊದಲು ಮುಷ್ಕರ ಕೈಬಿಡಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೋಮವಾರ ಕರೆ ನೀಡಿದ್ದಾರೆ.
ವೇತನ ಹೆಚ್ಚಳ ಹಾಗೂ ಇತರೆ ಬೇಡಿಕೆಗಳಿಗೆ ಒತ್ತಾಯಿಸಿ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಮುಂದೆ ವೇತನ ಹೆಚ್ಚಳದ ಪ್ರಸ್ತಾವನೆ ಇಲ್ಲ. ಸಾರಿಗೆ ಸಂಸ್ಥೆಯ ನೌಕರರಿಗೆ ಈಗಾಗಲೇ ವಹಿವಾಟಿನ ಶೇ.50ರಷ್ಟು ಸಂಬಳ ನೀಡುತ್ತಿದ್ದೇವೆ. ಹೀಗಾಗಿ ಅವರು ಮೊದಲು ಮುಷ್ಕರ ಹಿಂಪಡೆದು ಮಾತುಕತೆ ನಡೆಸಿದರೆ ಇತರೆ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಲಿದೆ ಎಂದರು.
ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ಮುಂದುವರೆಸಿದರೆ ಮಾತುಕತೆ ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಸಹ ಇದನ್ನೇ ಹೇಳಿದ್ದಾರೆ. ನಿನ್ನೆಯಿಂದ ಆಗಿರುವ ಎಲ್ಲಾ ಬೆಳವಣಿಗೆಗಳ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದೇನೆ ಎಂದರು. ಅಲ್ಲದೆ ಮುಷ್ಕರ ನಿರತ ನೌಕರರ ವಿರುದ್ಧ ಎಸ್ಮಾ ಜಾರಿಗೊಳಿಸುವುದಿಲ್ಲ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.
ನೆರೆಯ ರಾಜ್ಯಗಳಿಂದ ಹೆಚ್ಚುವರಿ ಬಸ್ಗೆ ಮನವಿ
ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಕಾರಣಕ್ಕಾಗಿ ಕರ್ನಾಟಕ ಸರ್ಕಾರ ವ್ಯವಸ್ಥಾಪಕ ನಿರ್ದೇಶಕರಿಗೆ ಇರುವ ವಿಶೇಷ ಅಧಿಕಾರವನ್ನು ಉಪಯೋಗಿಸಿಕೊಂಡು ನೆರೆಯ ರಾಜ್ಯಗಳಿಂದ ಹೆಚ್ಚುವರಿಯಾಗಿ ಬಸ್ ಓಡಿಸಲು ಮನವಿ ಮಾಡಿಕೊಳ್ಳಲು ನಿರ್ಧರಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಬಗ್ಗೆ ಈಗಾಗಲೇ ನೆರೆಯ ರಾಜ್ಯಗಳ ಸಾರಿಗೆ ಸಂಸ್ಥೆಗಳ ಜತೆ ಪರಸ್ಪರ ಸಹಕಾರ ಆಧಾರದ ಮೇಲೆ ಮನವಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics