ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಆಗ್ರಹಿಸಿದ್ದಾರೆ.
ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ 7.65 ಟಿಎಂಸಿ ನೀರು ಬಳಕೆಗೆ ಅವಕಾಶ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧಿಕರಣ ವಜಾಗೊಳಿಸಿ ತೀರ್ಪು ನೀಡಿದ ನಂತರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ನ್ಯಾಯಾಧಿಕರಣದ ತೀರ್ಪಿನ ಪೂರ್ಣ ಪ್ರತಿ ನನಗೆ ಇನ್ನೂ ಸಿಕ್ಕಿಲ್ಲ. ನಮ್ಮ ವಕೀಲರ ಜೊತೆ ಮಾತುಕತೆ ನಡೆಸಿದ್ದೇನೆ. ತೀರ್ಪಿನ ಪ್ರತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದ ಪರ ವಾದಿಸಿದ ವಕೀಲರೊಂದಿಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು,
ನೆಲ ಹಾಗೂ ಜಲ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಪ್ರಧಾನಿ ನರೇಂದ್ರ ಮೋದಿ ಅವರು ಮಹದಾಯಿ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ನಾನು ಒತ್ತಾಯಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದಿದ್ದಾರೆ.
ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿದೆ. ಈ ಸಂಬಂಧ ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಇನ್ನು ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಧಾರವಾಡ, ಬೆಳಗಾವಿ, ಹಾವೇರಿ ಹಾಗೂ ಗದಗ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಆ ಭಾಗದ ಸಂಸದರ ಕಚೇರಿಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics