ಬೆಂಗಳೂರು: ಕಳೆದ ಮೂರು ದಿನಗಳಿಂದ ಬಸ್ ಬಂದ್ ಮಾಡಿ ಮುಷ್ಕರ ನಡೆಸುತ್ತಿರುವ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ನೌಕರರ ಬೇಡಿಕೆಗೆ ಕಡೆಗೂ ಸರ್ಕಾರ ಸ್ಪಂದಿಸಿದ್ದು, ಶೇ.12.5ರಷ್ಟು ವೇತನ ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ.
ವೇತನ ಹೆಚ್ಚಳಕ್ಕೆ ಸಂಬಂಧಿಸಿದ್ದಂತೆ ಕಾರ್ಮಿಕ ಸಂಘಟನೆಗಳೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಡೆಸಿದ ಮಾತುಕತೆ ಬಹುತೇಕ ಯಶಸ್ವಿಯಾಗಿದ್ದು, ಶೇ.12.5ರಷ್ಟು ವೇತನ ಹೆಚ್ಚಳಕ್ಕೆ ನೌಕರರ ಸಂಘಟನೆಗಳ ಮುಖಂಡರು ಸಹ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ವೇಳೆ ಮುಷ್ಕರ ಹಿಂಪಡೆಯುವ ಸಾಧ್ಯತೆ ಇದೆ.
ರಾಮಲಿಂಗಾರೆಡ್ಡಿ ಅವರು ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಶೇ.12.5ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶೇ.35ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದ ಸಾರಿಗೆ ನೌಕರರು, ಇಂದು ಬೆಳಗ್ಗೆಯಷ್ಟೇ ಸಾರಿಗೆ ಸಚಿವರೊಂದಿಗೆ ನಡೆದ ಮಾತುಕತೆಯಲ್ಲಿ ಕನಿಷ್ಠ ಶೇ.18ರಷ್ಟಾದರೂ ವೇತನ ಹೆಚ್ಚಿಸಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಇದಕ್ಕೆ ಒಪ್ಪದ ಸಾರಿಗೆ ಸಚಿವರು ಮಧ್ಯಾಹ್ನ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಶೇ.12.5ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics