ಪ್ರಧಾನ ಸುದ್ದಿ

ಮತಕ್ಕಾಗಿ ಲಂಚ: ಮಲ್ಲಿಕಾರ್ಜುನ ಖೂಬಾ ವಿರುದ್ಧ ದೂರು ದಾಖಲು

Lingaraj Badiger
ಬೆಂಗಳೂರು: ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಮತಹಾಕಲು 5 ಕೋಟಿ ರುಪಾಯಿ ಲಂಚ ಕೇಳಿದೆ ಆರೋಪ ಎದುರಿಸುತ್ತಿರುವ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಹಾಗೂ ಇತರರ ವಿರುದ್ಧ ಮಂಗಳವಾರ ದೂರು ದಾಖಲಿಸಲಾಗಿದೆ.
ವೋಟಿಗಾಗಿ ನೋಟು ಪ್ರಕರಣದ ಕುರಿತಂತೆ ಕುಟುಕು ಕಾರ್ಯಾಚರಣೆಯಲ್ಲಿ ಭಾಗಿಯಾದವರ ವಿರುದ್ಧ ತನಿಖೆ ನಡೆಸಬೇಕೆಂದು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರು ಇಂದು ವಿಧಾನಸಭೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕುಟುಕು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗದಿಂದ ವರದಿ ಪಡೆದಿದ್ದ ಕೇಂದ್ರ ಚುನಾವಣಾ ಆಯೋಗ, ಈ ಬಗ್ಗೆ ತನಿಖೆಗೆ ಆದೇಶಿಸಿದೆ.
ಇಂಡಿಯಾ ಟುಡೆ ಮತ್ತು ಟೈಮ್ಸ್ ನೌ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ರಾಜ್ಯದ ಆರು ಮಂದಿ ಶಾಸಕರು ಹಾಗೂ ಇಬ್ಬರು ರಾಜ್ಯಸಭಾ ಚುನಾವಣಾ ಅಭ್ಯರ್ಥಿಗಳು ನೋಟಿಗಾಗಿ ವೋಟು ಡೀಲ್ ಕುದುರಿಸಿರುವುದು ಬಹಿರಂಗಗೊಂಡಿತ್ತು. ಈ ಕುರಿತು ರಾಜ್ಯ ಚುನಾವಣಾ ಆಯುಕ್ತ ಅನಿಲ್ ಕುಮಾರ್ ಜಾ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ನೀಡಿದ್ದರು.
SCROLL FOR NEXT