ಸಂಪುಟ ಪುನಾರಚನೆಗೆ ಸೋನಿಯಾ ಅಸ್ತು: 13 ಸಚಿವರಿಗೆ ಕೊಕ್, ಹೊಸ ಮುಖಗಳಿಗೆ ಮಣೆ
ಬಹು ನಿರೀಕ್ಷಿತ ರಾಜ್ಯ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಗ್ರೀನ್ ಸಿಗ್ನಲ್ ನೀಡಿದ್ದು, 13 ಹಾಲಿ ಸಚಿವರಿಗೆ ಕೊಕ್ ನೀಡಲು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ...
ನವದೆಹಲಿ: ಬಹು ನಿರೀಕ್ಷಿತ ರಾಜ್ಯ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಅವರು ಗ್ರೀನ್ ಸಿಗ್ನಲ್ ನೀಡಿದ್ದು, 13 ಹಾಲಿ ಸಚಿವರಿಗೆ ಕೊಕ್ ನೀಡಲು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ 10 ಮಂದಿ ಸಚಿವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ ಎಂದು ಹೇಳಲಾಗುತ್ತಿತ್ತಾದರೂ, ಈ ಸಂಖ್ಯೆ ಇದೀಗ 13ಕ್ಕೇ ಏರಿಕೆಯಾಗಿದೆ. ಒಟ್ಟು 13 ಮಂದಿ ಹಾಲಿ ಸಚಿವರನ್ನು ಕೈಬಿಟ್ಟು ಅಷ್ಟೇ ಪ್ರಮಾಣದಲ್ಲಿ ಹೊಸಬರಿಗೆ ಸಚಿವಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ನೀಡಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ ಇನ್ನೆರಡು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸಂಪುಟ ರಚನೆ ಕಸರತ್ತು ಪೂರ್ಣಗೊಳ್ಳಲಿದ್ದು, ಸಂಪುಟ ಪುನಾರಚನೆ ಕುರಿತು ಸಂಪೂರ್ಣ ಚಿತ್ರಣ ಲಭ್ಯವಾಗಲಿದೆ.
ಮತ್ತೊಂದು ಮೂಲದ ಪ್ರಕಾರ ಪ್ರಸ್ತುತ 13 ಮಂದಿ ಸಚಿವರಿಗೆ ಕೊಕ್ ನೀಡಿದರೂ, 12 ಮಂದಿಯನ್ನು ಮಾತ್ರ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳ ಅಸಮಾಧಾನ ಶಮನಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ ಅವರು ಪಾಲ್ಗೊಂಡಿದ್ದರು.
ಇನ್ನೆರಡು ದಿನದಲ್ಲಿ ರಾಜ್ಯಪಾಲರಿಗೆ ಪಟ್ಟಿ
ಇದೇ ವೇಳೆ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಇನ್ನೆರಡು ದಿನದಲ್ಲಿ ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ನೂತನ ಸಚಿವ ಸಂಪುಟದ ಪಟ್ಟಿ ನೀಡಲಾಗುತ್ತದೆ ಎಂದು ಹೇಳಿದರು.