ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳೇ ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ ನಂತರ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಎಸಿಬಿ ರಚನೆಯ ಕರಡು ಪ್ರತಿಯೊಂದಿಗೆ ಕಾಂಗ್ರೆಸ್ ನಾಯಕರಿಗೆ ಪತ್ರ ಬರೆದಿದ್ದಾರೆ.
ಎಸಿಬಿ ರಚನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಹಾಗೂ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಇಂದು ಸಿಎಂ ಪತ್ರ ಬರೆದಿದ್ದಾರೆ.
ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್ ಯಾವತ್ತೂ ರಾಜಿ ಮಾಡಿಕೊಂಡಿಲ್ಲ. ಅಧಿಕಾರದಲ್ಲಿದ್ದಾಗ ಮತ್ತು ಇಲ್ಲದಿದ್ದಾಗಲೂ ಕಾಂಗ್ರೆಸ್ ಹೋರಾಟ ನಡೆಸಿದೆ. ಪ್ರತಿಪಕ್ಷದಲ್ಲಿದ್ದಾಗಲೂ ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ನಿರಂತರ ಹೋರಾಟ ನಡೆಸಿದೆ. ಈಗಲೂ ಭ್ರಷ್ಟಾಚಾರದ ವಿರುದ್ಧದ ಹೋರಾಟ ಮುಂದುವರೆದಿದೆ ಎಂದು ಸಿಎಂ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ದೇಶದ 12 ರಾಜ್ಯಗಳಲ್ಲಿ ಈಗಾಗಲೇ ಎಸಿಬಿ ಅಸ್ತಿತ್ವದಲ್ಲಿದ್ದು, ಭ್ರಷ್ಟಾಚಾರ ನಿಯಂತ್ರಣದಲ್ಲಿ ಎಸಿಬಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಹಿನ್ನೆಲೆಯಲ್ಲಿ ಈಗ ರಾಜ್ಯದಲ್ಲೂ ಸ್ಥಾಪನೇ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಎಲ್ಲಾ ಸ್ಪಷ್ಟನೆಯೊಂದಿಗೆ ಭ್ರಷ್ಟಾಚಾರ ನಿಗ್ರಹ ದಳದ ಸ್ವರೂಪದ ಕರಡು ಪ್ರತಿಯನ್ನು ಸಹ ಸಿಎಂ ಕಾಂಗ್ರೆಸ್ ವರಿಷ್ಠರಿಗೆ ರವಾನಿಸಿದ್ದಾರೆ.
ಎಸಿಬಿ ರಚನೆಯನ್ನು ತೀವ್ರವಾಗಿ ವಿರೋಧಿಸಿದ್ದ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸಹ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಇಂದು ಪತ್ರ ಬರೆದಿದ್ದವು.