ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ನಿವೃತ್ತ ನ್ಯಾ.ವೈ ಭಾಸ್ಕರ್ ರಾವ್ ಅವರು ಸೋಮವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ.
ಮಗನ ಭ್ರಷ್ಟಾಚಾರಕ್ಕೆ ಸಹಕರಿಸಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ(ಎಸ್ ಐಟಿ) ನ್ಯಾ.ಭಾಸ್ಕರ್ ರಾವ್ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದು, ಆದರೆ ಇದನ್ನು ರದ್ದುಪಡಿಸುವಂತೆ ಕೋರಿ ಭಾಸ್ಕರ್ ರಾವ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ನ್ಯಾಯಾಧೀಶರ ಮುಂದೆ ಹಾಜರಾಗುವಂತೆ ಸೂಚಿಸಿತ್ತು.
ಪುತ್ರ ಅಶ್ವಿನ್ ರಾವ್ ಭ್ರಷ್ಟಾಚಾರಕ್ಕೆ ಸಹಕರಿಸಿದ ಆರೋಪ ಎದುರಿಸುತ್ತಿರುವ ಭಾಸ್ಕರ ರಾವ್ ಇದೇ ಮೊದಲ ಬಾರಿಗೆ ಮೆಯೋ ಹಾಲ್ ಬಳಿ ಇರುವ ವಿಶೇಷ ಕೋರ್ಟ್ ಗೆ ಹಾಜರಾಗಿ, ವಿಚಾರಣೆ ಎದುರಿಸಿದರು.
ಇದೇ ವೇಳೆ ಮಧ್ಯಂತರ ಜಾಮೀನು ಕೋರಿ ಆರೋಪಿ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ಕೋರ್ಟ್, ಒಂದು ಲಕ್ಷ ರುಪಾಯಿ ಬಾಂಡ್, ಹಾಗೂ ಒಬ್ಬರ ಶ್ಯೂರಿಟಿ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.