ಬೆಂಗಳೂರು: ಅತ್ತ ದೆಹಲಿಯಲ್ಲಿ ನೂತನ ನಿಗಮ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಇತ್ತ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಇಲಾಖಾ ಪ್ರಧಾನ ಕಾರ್ಯದರ್ಶಿಯವರ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜಿನಾಮೆ ಪತ್ರ ರವಾನಿಸಿರುವುದಾಗಿ ಮಂಜುಳಾ ಮಾನಸ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಇನ್ನೂ ಎಂಟುವರೆ ತಿಂಗಳ ಅಧಿಕಾರವಧಿ ಇತ್ತು. ಆದರೆ ಬೇರೆಯವರಿಗೆ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ಹೇಳಿದ್ದಾರೆ.
ಮೂಲತಃ ಮೈಸೂರಿನವರಾದ ಮಂಜುಳಾ ಮಾನಸ ಅವರು 2014ರಲ್ಲಿ ಜೂನ್ ನಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಂಜುಳಾ ಮಾನಸ ಅವರು ಮೈಸೂರು ನಗರಪಾಲಿಕೆ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಟಿಕೆಟ್ ಪಡೆದು ಜಯಗಳಿಸಿದ್ದರು. ಅದರಂತೆ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಿದ್ದರು. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಯ ಫಲವಾಗಿ ಮೇಯರ್ ಗಾದಿ ಕೈ ತಪ್ಪಿತ್ತು. ಬಳಿಕ ಮಹಿಳಾ ಆಯೋಗದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.