ಮಂಡ್ಯ: ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶಿಸಿರುವ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿವೆ.
ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ರಸ್ತೆ ಮಧ್ಯೆ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ ಪ್ರತಿಭಟನೆ ನಡೆಸುತ್ತಿರುವುದರಿಂದ ರಸ್ತೆ ಸಂಚಾರ ಅಸ್ತವಸ್ಯಗೊಂಡಿದೆ. ಇನ್ನು ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಇದೇ ವೇಳೆ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು, ಕಾವೇರಿ ನದಿ ನೀರು ಹಂಚಿಕೆ ಪರ ವಾದಿಸುತ್ತಿರುವ ರಾಜ್ಯದ ಪರ ವಕೀಲರಾದ ಪಾಲಿ ನಾರಿಮನ್ ರನ್ನು ಕೈಬಿಡುವಂತೆ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಅವರು ಹೇಳಿದ್ದಾರೆ.
ಕನ್ನಡ ಪರ ಸಂಘಟನೆಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಇಂದು ಶಾಲಾ-ಕಾಲೇಜುಗಳಿಗೆ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ರಜೆ ಘೋಷಿಸಿದ್ದಾರೆ.
ತಮಿಳುನಾಡಿಗೆ ಪ್ರತಿ ದಿನ 15 ಸಾವಿರ ಕ್ಯೂಸೆಕ್ಸ್ ನೀರನ್ನು 10 ದಿನ ಕಾಲ ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು.