ಬೆಂಗಳೂರು: ಕಾವೇರಿ ವಿವಾದ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸರ್ವಪಕ್ಷ ಸಭೆ ಅಂತ್ಯವಾಗಿದ್ದು, ಒಲ್ಲದ ಮನಸ್ಸಿನಿಂದಲೇ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ವಪಕ್ಷ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
"ಪ್ರಸ್ತುತ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಲು ಕಾನೂನಾತ್ಮಕವಾಗಿ ಕಷ್ಟ ಸಾಧ್ಯ. ಹೀಗಾಗಿ ಸುಪ್ರೀಂ ಕೋರ್ಟ್ ಆದೇಶ ಪರಿಪಾಲನೆ ಅನಿವಾರ್ಯವಾಗಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಪರಿಪಾಲಿಸಬೇಕಾಗುತ್ತದೆ, ಹೀಗಾಗಿ ತಮಿಳುನಾಡಿಗೆ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಭೆಯ ಈ ತೀರ್ಮಾನದಿಂದಾಗಿ ರೈತರು ಆತಂಕಗೊಳ್ಳುವ ಅವಶ್ಯಕತೆ. ರೈತರಿಗೆ ಬೆಳೆಗೆ ಹಾಗೂ ಕುಡಿಯಲು ಅವಶ್ಯವಿರುವಷ್ಟು ನೀರು ಕೊಡುತ್ತೇವೆ. ಅಂತೆಯೇ ಮುಂದಿನ ದಿನಗಳಲ್ಲಿ ಸುಪ್ರೀಂ ಕೋರ್ಟ್ ಗೆ ರಾಜ್ಯದ ಜಲಾಶಯಗಳ ಪರಿಸ್ಥಿತಿ ಮನವರಿಕೆ ಮಾಡಿಕೊಡಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಬಗ್ಗೆ ಕರ್ನಾಟಕದ ಕಾನೂನು ಹೋರಾಟ ಮುಂದುವರೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಸ್ತುತ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರು ಪರಿಶೀಲಿಸುವಂತೆ ಮೇಲ್ಮನವಿ ಸಲ್ಲಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಭೆಯಲ್ಲಿ ಈಶ್ವರಪ್ಪ-ಸಿದ್ದರಾಮಯ್ಯ ಜಟಾಪಟಿ
ಇನ್ನು ಸಭೆ ವೇಳೆ ವಿಪಕ್ಷ ನಾಯಕ ಈಶ್ವರಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಕಾವೇರಿ ನೀರು ಬಿಡುಗಡೆ ವಿಚಾರವಾಗಿ ಜಟಾಪಟಿ ನಡೆಸಿದ ಪ್ರಸಂಗ ಕೂಡ ನಡೆದಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ತಮಿಳುನಾಡಿಗೆ ನೀರು ಬಿಡುವಂತಾಗಿದೆ ಎಂಬ ಈಶ್ವರಪ್ಪ ಅವರ ಹೇಳಿಕೆಯಿಂದ ಆಕ್ರೋಶಗೊಂಡ ಸಿದ್ದರಾಮಯ್ಯ ಅವರು ನಿಮ್ಮ ಸರ್ಕಾರದ ಅವಧಿಯಲ್ಲೂ ತಮಿಳುನಾಡಿಗೆ ನೀರು ಬಿಡಲಾಗಿತ್ತು ಎಂದು ತಿರುಗೇಟು ನೀಡಿದರು. ಉಭಯ ನಾಯಕರ ವಾದ ಪ್ರತಿವಾದ ಸಭೆಯಲ್ಲಿ ಕೆಲಕಾಲ ವಾಗ್ವಾದಕ್ಕೆ ಕಾರಣವಾಗಿತ್ತು.
ಸಭೆಯಲ್ಲಿ ಸಚಿವರಾದ ಎಂಬಿ ಪಾಟೀಲ್, ಟಿಬಿ ಜಯಚಂದ್ರ, ರಮಾನಾಥ್ ರೈ, ಮಂಡ್ಯ ಮಾಜಿ ಸಂಸದೆ ರಮ್ಯಾ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ವಿಪಕ್ಷ ನಾಯಕರಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಈಶ್ವರಪ್ಪ, ಪಿಸಿಮೋಹನ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.