ಕಾವೇರಿ ನದಿಯಲ್ಲಿ ತಮಿಳು ರೈತರ ಪ್ರತಿಭಟನೆ
ತಿರುಚಿ: ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲಿಸದಿರಲು ನಿರ್ಧರಿಸಿದ ಮಾರನೇ ದಿನವೇ ತಮಿಳುನಾಡಿನಲ್ಲಿ ಕಾವೇರಿ ನೀರಿಗಾಗಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ನೀರು ಬಿಡದ ಕರ್ನಾಟಕ ಸರ್ಕಾರವನ್ನು ವಜಾಗೊಳಿಸಬೇಕು ಮತ್ತು ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಆಗ್ರಹಿಸಿದ್ದಾರೆ.
ತಮಿಳುನಾಡು ರೈತರು ಇಂದು ಬೆಳಗ್ಗೆಯಿಂದ ತಿರುಚಿಯ ಶ್ರೀರಂಗಂ ಬಳಿ ಕಾವೇರಿ ನದಿಯಲ್ಲಿ ನಿಂತು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಕರ್ನಾಟಕ ಸರ್ಕಾರವನ್ನು ವಜಾಗೊಳಿಸಬೇಕು ಎಂದಿರುವ ದಕ್ಷಿಣ ಭಾರತ ಅಂತರಾಜ್ಯ ನದಿಗಳ ರೈತರ ಸಂಘದ ಅಧ್ಯಕ್ಷ ಪಿ.ಅಯ್ಯಕಣ್ಣು ಅವರು, ಈ ಬಗ್ಗೆ ಕೇಂದ್ರ ಸರ್ಕಾರ ಮೌನವಹಿಸಿರುವುದು ಏಕೆ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಈ ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಒಟ್ಟು ಏಳು ದಿನ ತಮಿಳುನಾಡಿಗೆ ನೀರುಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಆದರೆ ಈ ಆದೇಶ ಪಾಲಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮವಾಗಿ ನೀರು ಬಿಡದಿರಲು ನಿರ್ಧರಿಸಿದೆ.