ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಅಂಗಳಕ್ಕೆ ಬಂದಿದ್ದು, ಕರ್ನಾಟಕ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಮಂಗಳವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಸೆ.20ರ ಆದೇಶವನ್ನು ಮಾರ್ಪಡಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಶುಕ್ರವಾರದೊಳಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಏರ್ಪಾಡು ಮಾಡುವಂತೆ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರಿಗೆ ಸೂಚಿಸಿದೆ.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನೊಳಗೊಂಡ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ನಡೆಸಬೇಕಿದೆ. ಆದರೆ, ತಮಿಳುನಾಡಿನ ಸಿಎಂ ಜಯಲಲಿತಾ ಅವರು ಅಸ್ವಸ್ಥರಾಗಿ ಆಪೊಲೋ ಆಸ್ಪತ್ರೆ ಸೇರಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರ ಯಾವ ನಿರ್ಣಯ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ.
ಒಕ್ಕೂಟ ವ್ಯವಸ್ಥೆಯಲ್ಲಿ ಸುಪ್ರೀಂ ಆದೇಶ ಪಾಲಿಸದಿರುವುದು ಸರಿಯಲ್ಲ. ಸುಪ್ರೀಂಕೋರ್ಟ್ ಘನತೆ ಎತ್ತಿ ಹಿಡಿಯಿರಿ ಎಂದಿರುವ ಕೋರ್ಟ್, ಸದನ ನಿರ್ಣಯ ಏನೇ ಇದ್ದರೂ ಮೊದಲು ತಮಿಳುನಾಡಿಗೆ ನಾಳೆಯಿಂದ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಮೂರು ದಿನಗಳ ಕಾಲ ಒಟ್ಟು 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.