ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ಸದಸ್ಯೆ ಮಂಗಳಾ ಶ್ರೀಧರ್ ಅವರಿಗೆ ಬಿಗ್ ರಿಲೀಫ್ ನೀಡಿರುವ ಹೈಕೋರ್ಟ್ ಏಕ ಸದಸ್ಯ ಪೀಠ, ಕೆಪಿಎಸ್ ಸಿ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಅವರ ವಿರುದ್ಧದ ಪ್ರಕರಣವನ್ನು ಮಂಗಳವಾರ ರದ್ದುಗೊಳಿಸಿದೆ.
ಮಂಗಳ ಶ್ರೀಧರ್ ಅವರ ವಿರುದ್ಧ ರಾಜ್ಯಪಾಲ ವಿ.ಆರ್ ವಾಲಾ ಅವರು ಪ್ರಾಸುಕ್ಯೂಷನ್ ಅನುಮತಿ ನೀಡಿರುವುದು ಸೂಕ್ತವಲ್ಲ. ರಾಷ್ಟ್ರಪತಿಗಳು ಮಾತ್ರ ಕೆಪಿಎಸ್ ಸಿ ಸದಸ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬಹುದು ಎಂದು ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.
ಕೆಪಿಎಸ್‌ಸಿ ಸದಸ್ಯೆಯಾಗಿರುವ ಮಂಗಳಾ ಶ್ರೀಧರ್ ಅವರು 2011ರ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಎ ಮತ್ತು ಬಿ ವೃಂದದ 362 ಹುದ್ದೆಗಳ ನೇಮಕ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಅವರ ವಿರುದ್ಧ ದೂರು ದಾಖಲಿಸಲಾಗಿತ್ತು.