ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೂ ತಮಿಳುನಾಡಿಗೆ ನಿತ್ಯ ಎರಡು ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವುದನ್ನು ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಕಾವೇರಿ ಐ ತೀರ್ಪು ಪ್ರಶ್ನಿಸಿ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ತನ್ನ ಮಧ್ಯಂತರ ಆದೇಶವನ್ನು ಮುಂದುವರೆಸಿದ್ದು, ಫೆಬ್ರವರಿ 7ರ ವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚಿಸಿದೆ.
ಫೆಬ್ರವರಿ 7ರಂದು ಅಂತಿಮ ವಿಚಾರಣೆ ನಡೆಸಲಿದ್ದು, ಆವರೆಗೂ ತಮಿಳುನಾಡಿಗೆ ನಿತ್ಯ 2 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವುದನ್ನು ಮುಂದುವರಿಸುವಂತೆ ನ್ಯಾ.ದೀಪಕ್ ಮಿಶ್ರಾ, ಅಮಿತವಾ ರಾಯ್ ಮತ್ತು ಎ.ಎಂ.ಖಾನ್‌ವಿಲ್ಕರ್ ಅವರನ್ನು ಒಳಗೊಂಡ ನ್ಯಾಯಪೀಠ ಆದೇಶಿಸಿದೆ.
ಡಿಸೆಂಬರ್ 9ರಂದು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳು ಕಾವೇರಿ ನ್ಯಾಯಾಧಿಕರಣದ ಐ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ಪ್ರತಿ ದಿನ ವಿಚಾರಣೆ ನಡೆಸುವುದಾಗಿ ತಿಳಿಸಿದೆ.