ಜಲ್ಲಿಕಟ್ಟುಗೆ ಸುಗ್ರೀವಾಜ್ಞೆ: ತಮಿಳುನಾಡು ಮುಖ್ಯಮಂತ್ರಿಯಿಂದ ಪ್ರಧಾನಿ ಭೇಟಿ!
ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಬುಧವಾರ...
ಚೆನ್ನೈ: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ ಬುಧವಾರ ತೀವ್ರ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರು ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.
ನಾಳೆ ಎಐಎಡಿಎಂಕೆಯ 51 ಸಂಸದರೊಂದಿಗೆ ಪ್ರಧಾನಿ ಭೇಟಿ ಮಾಡಲಿರುವ ಪನ್ನೀರ್ ಸೆಲ್ವಂ ಅವರು, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಲಿದ್ದಾರೆ.
ಈ ಮಧ್ಯೆ ಮರೀನಾ ಬೀಚ್ ನಲ್ಲಿ ವಿದ್ಯಾರ್ಥಿಗಳ ಹಾಗೂ ಐಟಿ ಉಗ್ಯೋಗಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದು, ಶಾಂತಿ ಕಾಪಾಡುವಂತೆ ಸಿಎಂ ಮನವಿ ಮಾಡಿದ್ದಾರೆ.
ಜಲ್ಲಿಕಟ್ಟು ಕ್ರೀಡೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಸಾವಿರಾರು ಯುವಕರು ನಿನ್ನೆಯಿಂದ ನಡೆಸುತ್ತಿದ್ದ ಪ್ರತಿಭಟನೆ ಇಂದು ಟೆಕಿಗಳು ಸಾಥ್ ನೀಡಿದ್ದರು. ಇದೀಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಮಿಳುನಾಡಿನ ಖ್ಯಾತ ನಟ-ನಟಿಯರೂ ಕೂಡ ಪ್ರತಿಭಟನೆಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.