ರಜೌರಿ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ತನ್ನ ಉದ್ಧಟತನವನ್ನು ಮುಂದುವರೆಸಿದ್ದು, ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.
ಜಮ್ಮುಮತ್ತು ಕಾಶ್ಮೀರದ ಭಿಂಬರ್ ಗಾಲಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಬೆಳಿಗ್ಗೆ 8.45ರ ಸುಮಾರಿಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಸೇನಾ ಯೋಧರನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರವನ್ನು ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಕೂಡ ಪಾಕಿಸ್ತಾನ ಸೇನೆ ಭಿಂಬರ್ ಗಾಲಿ, ನೌಶೆರಾ ಮತ್ತು ಪೂಂಚ್ ಸೆಕ್ಟರ್ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಕಳೆದ ಸೋಮವಾರ ಉರಿ ಸೆಕ್ಟರ್ ಬಳಿ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದರು.