ನವದೆಹಲಿ: ಇನ್ನುಮುಂದೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಪಡೆಯಲು ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಲಿದೆ.
ಕಳೆದ ತಿಂಗಳು ಅಂತ್ಯದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಬಿಸಿಯೂಟದ ಯೋಜನೆಯಡಿ ಕಾರ್ಯನಿರ್ವಹಿಸುವ ಅಡಿಗೆಯವರು ಹಾಗೂ ಅಡಿಗೆ ಸಹಾಯಕರು ಮತ್ತು ವಿದ್ಯಾರ್ಥಿಗಳು ಕಡ್ಡಾಯ ಆಧಾರ್ ಸಂಖ್ಯೆ ಹೊಂದಿರುಬೇಕು ಎಂದು ಹೇಳಿದೆ. ಅಲ್ಲದೆ ಆಧಾರ್ ನೋಂದಣಿ ಮಾಡಿಸದ ವಿದ್ಯಾರ್ಥಿಗಳು, ಅಡುಗೆಯವರಿಗೆ, ಸಹಾಯಕರಿಗೆ ಜೂನ್ 30ರವರೆಗೆ ಅಂತಿಮ ಗಡುವು ನೀಡಿದೆ.
ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ಹಾಗೂ ಅಸ್ಸಾಂ ಹೊರತು ಪಡಿಸಿ ದೇಶದ ಎಲ್ಲ ಪ್ರದೇಶಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಬಿಸಿಯೂಟ ಯೋಜನೆಯಲ್ಲಿ ಕಾರ್ಯಕ್ಷಮತೆ ಮತ್ತು ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದ್ದು, ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ನೀಡಲಾಗುವ ಸಬ್ಸಿಡಿ ಯೋಜನೆಗಳಿಗಾಗಿ ಆಧಾರ್ ಸಂಖ್ಯೆ ಕಡ್ಡಾಯ ಮಾಡಲು ನಿರ್ಧರಿಸಿದೆ.
ಮಧ್ಯಾಹ್ನದ ಬಿಸಿಯೂಟ ಯೋಜನೆ ಪಡೆಯಲು ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆ ಕಡ್ಡಾಯಗೊಳಿಸಿ ಶಾಲೆಗಳಿಗೆ ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics