ತಿರುವನಂತಪುರಂ: ಅನಾರೋಗ್ಯದ ಹಿನ್ನೆಲೆಯಲ್ಲಿ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ವಿ.ಎಂ. ಸುಧೀರನ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಇಂದು ಕೆಪಿಸಿಸಿ ಮುಖ್ಯ ಕಚೇರಿಯಲ್ಲಿ ತಮ್ಮ ರಾಜಿನಾಮೆ ಘೋಷಿಸಿದ ಸುಧೀರನ್ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಸುಮಾರು ಮೂರು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿದ್ದ ಸುಧೀರನ್ ಅವರು,ಇತ್ತೀಚಿಗಷ್ಟೇ ಕೊಝಿಕೊಡ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ತೀವ್ರ ಅನಾರೋಗ್ಯಕ್ಕಿಡಾಗಿದ್ದರು.
ವೈದ್ಯರ ಸಲಹೆ ಆಧಾರದ ಮೇಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದು, ನನಗೆ ಸುದೀರ್ಘ ಕಾಲ ಚಿಕಿತ್ಸೆಯ ಅಗತ್ಯವಿರುವುದರಿಂದ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮಾಜಿ ಸ್ಪೀಕರ್ ಹಾಗೂ ಆರೋಗ್ಯ ಸಚಿವರಾಗಿರುವ ಸುಧೀರನ್ ಅವರು ಫೆಬ್ರವರಿ 10, 2014ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.