ಪ್ರಧಾನ ಸುದ್ದಿ

ಬಜೆಟ್ ಅಧಿವೇಶನದಲ್ಲೂ ಕಾಂಗ್ರೆಸ್ 'ಡೈರಿ ಸ್ಫೋಟ'; ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ

Lingaraj Badiger
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮುಜುಗರ ಉಂಟು ಮಾಡಿದ್ದ ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಸಲ್ಲಿಸಿರುವ 'ಡೈರಿ' ವಿಚಾರ ಗುರುವಾರ ಬಜೆಟ್ ಅಧಿವೇಶನದಲ್ಲೂ ಪ್ರತಿಧ್ವನಿಸಿದ್ದು, ವಿಧಾಸಭೆ ಕಲಾಪವನ್ನು ನಾಳೆಗೆ ಮುಂದೂಡುಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ರುಪಾಯಿ ಕಪ್ಪ ನೀಡಿರುವ ಬಗ್ಗೆ ಉಲ್ಲೇಖಿಸಿರುವ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಡೈರಿ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದ ಪರಿಣಾಮ ಆಡಳಿತ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಇಂದು ತೀವ್ರ ಜಟಾಪಟಿ ನಡೆಯಿತು. ಇದರಿಂದಾಗಿ ಸ್ಪೀಕರ್ ಕೆಬಿ ಕೋಳಿವಾಡ ಅವರು ವಿಧಾನಸಭೆ ಕಲಾಪವನ್ನು ಮಧ್ಯಾಹ್ನ 3ಗಂಟೆಗೆ ಮುಂದೂಡಿದರು. ಬಳಿಕ ಕಲಾಪ ಆರಂಭವಾದಾಗ ಬಿಜೆಪಿ ಸದಸ್ಯರು ಮತ್ತೆ ಗದ್ದಲ, ಕೋಲಾಹಲ ನಡೆಸಿದ ಪರಿಣಾಮ ಸ್ಪೀಕರ್ ಕಲಾಪವನ್ನು ನಾಳೆಗೆ ಮುಂದೂಡಿದರು.
ಕಲಾಪ ಆರಂಭವಾಗುತ್ತಿದ್ದಂತೆಯೇ, ನಿಯಮ 69ರ ಅಡಿ ಡೈರಿ ವಿಚಾರದ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಬಿಜೆಪಿ ಸದಸ್ಯರು ಆಗ್ರಹಿಸಿದರು. ಆದರೆ ನಿಲುವಳಿ ಸೂಚನೆ ಅಡಿಯಲ್ಲಿ ಡೈರಿ ವಿಚಾರ ಚರ್ಚೆಗೆ ಅವಕಾಶ ಇಲ್ಲ ಎಂದು ಕಾನೂನು ಸಚಿವ ಟಿಬಿ ಜಯಚಂದ್ರ ಉತ್ತರ ನೀಡಿದಾಗ, ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಈ ಮಧ್ಯೆ, ಡೈರಿ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿರುವ ಬಿಜೆಪಿ ನಾಯಕರೊಂದಿ ಸ್ಪೀಕರ್ ಕೆಬಿ ಕೋಳಿವಾಡ ಅವರು ನಡೆಸಿದ ಸಂಧಾನ ವಿಫಲವಾಗಿದ್ದು, ಕಲಾಪದಲ್ಲಿ ಪ್ರತಿಭಟನೆ ಮುಂದುವರಿಸಲು ಬಿಜೆಪಿ ನಿರ್ಧರಿಸಿದೆ.
SCROLL FOR NEXT