ನ್ಯೂಯಾರ್ಕ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದರೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ವಿಶ್ವಸಂಸ್ಥೆಯ ಅಧಿವೇಶನದಲ್ಲಿ ವಿಶ್ವ ನಾಯಕರು ಭಾಗವಹಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ನವಾಜ್ ಷರೀಫ್ ಸಹ ಉಪಸ್ಥಿತರಿರಲಿದ್ದಾರೆ. ವಿಶ್ವ ಸಂಸ್ಥೆ ಅಧಿವೇಶನದಲ್ಲಿ ಪಾಕಿಸ್ತಾನ ಪ್ರಧಾನಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ. ಕಾಶ್ಮೀರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಭಾರತ ಸಿದ್ಧತೆ ನಡೆಸಿದೆ ಎಂದು ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.
ಯುಎನ್ ಅಧಿವೇಶನದ ಬಗ್ಗೆ ಮಾತನಾಡಿದ್ದ ಪಾಕಿಸ್ತಾನ ರಾಯಭಾರಿ, ಪಾಕಿಸ್ತಾನ ಪ್ರಧಾನಿ ಕಾಶ್ಮೀರ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ವಿದೇಶಾಂಗ ಇಲಾಖೆ ವಕ್ತಾರರು ಹೇಳಿಕೆ ನೀಡಿದ್ದಾರೆ. ಕಳೆದ ವರ್ಷವೂ ಪಾಕಿಸ್ತಾನ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿತ್ತು.